image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ

​ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನವಾಗಿದೆ.

​ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಂಗಳೂರಿನ ಶಾರದಾ ವಿದ್ಯಾಲಯ, ಕೈರಂಗಳದ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿಟ್ಲ ಜೇಸಿಸ್ ಶಾಲೆ, ಬಂಟ್ವಾಳದ ಎಸ್.ವಿ.ಎಸ್. ಶಾಲೆ, ಉಜಿರೆಯ ಎಸ್.ಡಿ.ಎಂ. ಶಾಲೆ, ಬೆಳ್ತಂಗಡಿಯ ವಾಣಿ ಇಂಗ್ಲೀಷ್ ಮಾಧ್ಯಮ ಶಾಲೆ ಹಾಗೂ ಮಡಂತ್ಯಾರಿನ ಸೆಕ್ರೇಡ್ ಹಾರ್ಟ್ಸ್ ಪ್ರೌಢಶಾಲೆಯಲ್ಲಿ ಪ್ರವೇಶಾತಿ ದೊರೆಯಲಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿಗಳ ಮಿತಿಯೊಳಗಿರಬೇಕು. ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪೌರಕಾರ್ಮಿಕರ ಮಕ್ಕಳು, ದೌರ್ಜನ್ಯಕ್ಕೊಳಗಾದವರ ಮಕ್ಕಳು, ಕೃಷಿ ಕಾರ್ಮಿಕರ ಮತ್ತು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು ಸೇರಿದಂತೆ ಸಾಮಾಜಿಕವಾಗಿ ಹಿಂದುಳಿದ ವರ್ಗದವರಿಗೆ ಈ ಯೋಜನೆಯಲ್ಲಿ ಆದ್ಯತೆ ನೀಡಲಾಗುತ್ತದೆ.

​ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದಲ್ಲಿ, ಡಯಟ್ (DIET) ಮೂಲಕ ಪ್ರವೇಶ ಪರೀಕ್ಷೆ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ ಹಾಗೂ ಭಾವಚಿತ್ರಗಳೊಂದಿಗೆ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಂಗಳೂರಿನ ಕೊಟ್ಟಾರದಲ್ಲಿರುವ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿಗಳ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0824-2451269 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ