ಮಂಗಳೂರು: ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಹಾಗೂ ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಸಾಧಕರಿಗೆ 2027ನೇ ಸಾಲಿನ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲು ಕೇಂದ್ರ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಪ್ರಶಸ್ತಿಗೆ ಸಂಬಂಧಿಸಿದ ಸಂಪೂರ್ಣ ನಿಯಮಾವಳಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಅರ್ಹ ಹೆಸರುಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯವೇ ಶಿಫಾರಸ್ಸು ಮಾಡಬೇಕಾಗುತ್ತದೆ.
ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಆದರೆ, ರಾಜ್ಯ ಸರ್ಕಾರವು ಇವುಗಳನ್ನು ಪರಿಶೀಲಿಸಿ ಆನ್‌ಲೈನ್ ಮೂಲಕ ಕೇಂದ್ರಕ್ಕೆ ಕಳುಹಿಸಬೇಕಾಗಿರುವುದರಿಂದ ಸಾರ್ವಜನಿಕರು ಮತ್ತು ಸಂಸ್ಥೆಗಳು ತಮ್ಮ ಶಿಫಾರಸ್ಸುಗಳನ್ನು ಜುಲೈ 15 ರೊಳಗೆ ಸಲ್ಲಿಸಬೇಕಾಗಿದೆ. ಆಸಕ್ತರು ಪ್ರಸ್ತಾವನೆಗಳನ್ನು ಖುದ್ದಾಗಿ, ಅಂಚೆ ಮೂಲಕ ಅಥವಾ ರಾಜ್ಯ ಸರ್ಕಾರದ ಅಧಿಕೃತ ಇ-ಮೇಲ್ (uspolitical-dpar@karnataka.gov.iಟಿ) ವಿಳಾಸಕ್ಕೆ ಕಳುಹಿಸಬಹುದಾಗಿದೆ. ಜುಲೈ 15 ರ ನಂತರ ಬರುವ ಯಾವುದೇ ಅರ್ಜಿ ಅಥವಾ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.