ಮಂಗಳೂರು: ನಗರದ ವಿವಿಧ ಭಾಗಗಳಲ್ಲಿ ನಿರಂತರವಾಗಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಜಾಲವನ್ನು ಸಕಾಲಿಕ ಕಾರ್ಯಾಚರಣೆ ನಡೆಸಿದ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮೂವರು ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕರು ಸೇರಿದಂತೆ ಒಟ್ಟು 07 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಲಾಗಿದ್ದ 06 ಬೈಕ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 03 ಬೈಕ್ಗಳು ಸೇರಿದಂತೆ ಒಟ್ಟು 09 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸರಣಿ ದ್ವಿಚಕ್ರ ವಾಹನ ಕಳವು ಪ್ರಕರಣಗಳು ವರದಿಯಾಗಿದ್ದವು. ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ವೆಲೆನ್ಸಿಯಾ ಜಂಕ್ಷನ್ ಬಳಿಯ ಡಾನ್ ಬಾಸ್ಕೋ ಹಾಸ್ಟೆಲ್ ಮುಂಭಾಗ ನಿಲ್ಲಿಸಿದ್ದ ಕೆ.ಟಿ.ಎಮ್ ಡ್ಯೂಕ್ ಮೋಟಾರು ಸೈಕಲ್ (ಅಕ್ಟೋಬರ್ 12), ಜಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಯಮಹಾ ಎಫ್.ಜೆಡ್ ಮೋಟಾರ್ ಸೈಕಲ್ (ಅಕ್ಟೋಬರ್ 19), ಅತ್ತಾವರ ಕೆ.ಎಮ್.ಸಿ ಆಸ್ಪತ್ರೆಯ ಬಳಿಯ ದುರ್ಗಾ ಹೋಟೇಲ್ ಮುಂದೆ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ (ಅಕ್ಟೋಬರ್ 21) ಹಾಗೂ ಹೊಯಿಗೆ ಬಜಾರ್ನ ಭಗವತಿ ಅಪಾರ್ಟ್ಮೆಂಟ್ ಕೆಳಗೆ ನಿಲ್ಲಿಸಿದ್ದ ಕೆ.ಟಿ.ಎಂ. ಡ್ಯೂಕ್ ಬೈಕ್ (ಅಕ್ಟೋಬರ್ 22) ಕಳವಾಗಿದ್ದವು. ಅದೇ ರೀತಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಬಳಿ ನಿಲ್ಲಿಸಲಾಗಿದ್ದ ರಾಯಲ್ ಎನ್ ಪೀಲ್ಡ್ ಬುಲೆಟ್ ಮೋಟಾರ್ ಸೈಕಲ್ (ಅಕ್ಟೋಬರ್ 18) ಹಾಗೂ ಕುತ್ತಾರ್ ಪಂಡಿತ್ ಹೌಸ್ ಬಳಿ ನಿಲ್ಲಿಸಿದ್ದ ಯಮಹಾ ಎಫ್.ಜೆಡ್ ಮೋಟಾರ್ ಸೈಕಲ್ (ಅಕ್ಟೋಬರ್ 21) ಕಳವಾಗಿದ್ದವು. ಈ ಸಂಬಂಧ ಮಂಗಳೂರು ದಕ್ಷಿಣ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಉಳ್ಳಾಲ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳ ಗಂಭೀರತೆಯನ್ನು ಪರಿಗಣಿಸಿ ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ತನಿಖೆ ಕೈಗೊಂಡ ವಿಶೇಷ ತಂಡವು ಒಟ್ಟು 7 ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ. ಬಂಧಿತ ಪ್ರಮುಖ ಆರೋಪಿಗಳನ್ನು ಮೂಡುಶೆಡ್ಡೆ ಶಿವನಗರದ ಮಹಮ್ಮದ್ ಸಿಯಾಮ್ (19), ಜೋಕಟ್ಟೆಯ ಮುಹಮ್ಮದ್ ನಾಸೀಫ್ @ ನಸೀಫ್ (19), ಮೂಡುಶೆಡ್ಡೆ ಶಿವನಗರದ ಮೊಹಮ್ಮದ್ ರಾಹೀಲ್ (18) ಹಾಗೂ ಕುಟ್ಟಿ ಪಲ್ಕೆ ಸದಾಶಿವ ನಗರದ ನಿಖೀಲ್ (18) ಎಂದು ಗುರುತಿಸಲಾಗಿದೆ. ಇವರೊಂದಿಗೆ ಭಾಗಿಯಾಗಿದ್ದ ಮೂವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದಾಗ ಕಳವಿನ ಹಿಂದಿದ್ದ ಅಸಲಿ ಉದ್ದೇಶ ಬೆಳಕಿಗೆ ಬಂದಿದೆ. ಆರೋಪಿಗಳು ಸರಗಳ್ಳತನ ಸೇರಿದಂತೆ ಇತರ ದುಷ್ಕೃತ್ಯಗಳನ್ನು ಎಸಗಿ, ಬಂದ ಲಾಭಾಂಶದಿಂದ ಐಷಾರಾಮಿ ಜೀವನ ನಡೆಸುವ ಉದ್ದೇಶ ಹೊಂದಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಲಾಗುತ್ತಿದ್ದ ಬೆಲೆಬಾಳುವ ಹಾಗೂ ಐಷಾರಾಮಿ ಮೋಟಾರ್ ಸೈಕಲ್ಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡಿ, ಅವುಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರೆಂಬುದು ತನಿಖೆಯಿಂದ ತಿಳಿದುಬಂದಿದೆ.
ಆರೋಪಿಗಳಿಂದ ಕಳವು ಮಾಡಲಾಗಿದ್ದ ಎಲ್ಲಾ 6 ದ್ವಿಚಕ್ರ ವಾಹನಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 9 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಲಾದ ವಾಹನಗಳ ಒಟ್ಟು ಅಂದಾಜು ಮೌಲ್ಯ ರೂ. 4,50,000/- ಎಂದು ಅಂದಾಜಿಸಲಾಗಿದೆ. ಬಂಧಿತ ನಾಲ್ವರು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಈ ಯಶಸ್ವಿ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ರಾಘವೇಂದ್ರ ಬೈಂದೂರು ಅವರ ನೇತೃತ್ವದಲ್ಲಿ ಪಿ.ಎಸ್.ಐ ಮಾರುತಿ ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ, ಆಂಜನೇಯ ಕೆ.ಎಸ್ ಅವರು ಭಾಗವಹಿಸಿದ್ದು, ಮಂಗಳೂರು ದಕ್ಷಿಣ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಯವರು ಸಂಪೂರ್ಣ ಸಹಕಾರ ನೀಡಿದ್ದಾರೆ. ಪೊಲೀಸ್ ತಂಡದ ಸಕಾಲಿಕ ಕಾರ್ಯಾಚರಣೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.