ಪುತ್ತೂರು: ಅಪ್ರಾಪ್ತ ಬಾಲಕಿಯೊಬ್ಬಳ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಕಾರ್ಯನಿರ್ವಹಣೆ - ಪುತ್ತೂರು) ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿವಾಸಿ, 34 ವರ್ಷದ ಸದ್ದಾಂ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಈತ ಕಡಬ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಕಡಬ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಕ್ರಿಮಿನಲ್ ಪ್ರಕರಣಗಳು ಈಗಾಗಲೇ ದಾಖಲಾಗಿದ್ದವು.
2019ರಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 24/2019ರಂತೆ ಐಪಿಸಿ ಸೆಕ್ಷನ್ 376(2)(n), 376(3), 506 ಹಾಗೂ ಪೋಕ್ಸೋ (POCSO) ಕಾಯ್ದೆಯ ಸೆಕ್ಷನ್ 5(j)(ii) L, 6 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕರಾಗಿದ್ದ ನಾಗೇಶ್ ಕೆ. ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸುಮಿಂಗಲಾ ಚಕಲಬ್ಬಿ ಅವರು, ಆರೋಪಿಯ ಮೇಲಿದ್ದ ಆರೋಪಗಳು ಸಂಶಯಾತೀತವಾಗಿ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಪೋಕ್ಸೋ ಕಾಯ್ದೆಯ ಸೆಕ್ಷನ್ 5(l) ಮತ್ತು 5(j)(ii) ರೊಂದಿಗೆ ಓದಲಾದ ಸೆಕ್ಷನ್ 6 ರ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಇದರೊಂದಿಗೆ, ಐ.ಪಿ.ಸಿ ಸೆಕ್ಷನ್ 506 ಅಡಿಯಲ್ಲಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದ್ದು, ದಂಡ ತೆರಲು ವಿಫಲವಾದಲ್ಲಿ ಮತ್ತೆ 1 ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಈ ಎರಡೂ ಶಿಕ್ಷೆಗಳು ಏಕಕಾಲದಲ್ಲಿ (Concurrently) ಜಾರಿಯಲ್ಲಿರಲಿವೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡಂತಾಯ ಅವರು ಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಿದ್ದರು.