ಮಂಗಳೂರು: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿ, ಸ್ಥಳೀಯ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರು ನಗರದ ಪಣಂಬೂರು ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆಯಲಾದ ಬಾಂಗ್ಲಾದೇಶದ ಪ್ರಜೆಗಳನ್ನು ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂದು ಗುರುತಿಸಲಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಣಂಬೂರು ಪೊಲೀಸ್ ನಿರೀಕ್ಷಕರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪಣಂಬೂರು ಪೊಲೀಸರ ತಂಡ ಸದರಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದೆ.
ದಾಳಿಯ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ, ಅವರಿಬ್ಬರೂ ಭಾರತದಲ್ಲಿ ವಾಸಿಸಲು ಅಥವಾ ಕೆಲಸ ಮಾಡಲು ಯಾವುದೇ ಅಧಿಕೃತ ದಾಖಲೆಗಳು (ಪಾಸ್ಪೋರ್ಟ್ ಅಥವಾ ವೀಸಾ) ಇಲ್ಲದೆ ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿ ನೆಲೆಸಿರುವುದು ದೃಢಪಟ್ಟಿದೆ.
ಅಕ್ರಮವಾಗಿ ನೆಲೆಸಿದ್ದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಇಬ್ಬರನ್ನೂ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ (Detention Centre) ಇರಿಸಲಾಗಿದೆ. ಬಳಿಕ ಇವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳ ಮುಂದೆ ಹಾಜರುಪಡಿಸಿ, ನಿಯಮಾನುಸಾರ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಚಾಲನೆ ನೀಡಲಾಗಿದೆ.
ಪಣಂಬೂರು ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಪತ್ತೆ ಕಾರ್ಯದಲ್ಲಿ, ಪಿಎಸ್ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ. ಮತ್ತು ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಅವರು ಪಾಲ್ಗೊಂಡಿದ್ದರು.