ಸುಳ್ಯ: ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನವೆಂಬರ್ 18ರ ಬೆಳಗ್ಗಿನ ಜಾವ ನಡೆದಿದೆ.
ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಸಮೀಪ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪ-ನಿರೀಕ್ಷಕ ಉದಯ ರವಿ ಅವರು ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಪೊಲೀಸರ ಗಮನಕ್ಕೆ ಬಂದಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಆರೋಪಿಗಳನ್ನು ಸುಳ್ಯದ ಆಲೆಟ್ಟಿ ನಿವಾಸಿಗಳಾದ ಹಾಶಿರ್.ಎ (28) ಹಾಗೂ ಸಂಶುದ್ದೀನ್.ಎಸ್.ಎಂ (25) ಎಂದು ಗುರುತಿಸಲಾಗಿದೆ. ಜಾನುವಾರುಗಳನ್ನು ಕದ್ದು, ಅವುಗಳ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕಳ್ಳತನಕ್ಕೆ ಯತ್ನಿಸುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಕಳ್ಳತನಕ್ಕೆ ಯತ್ನಿಸಿದ ಎರಡು ಜಾನುವಾರುಗಳು ಹಾಗೂ ಆರೋಪಿಗಳು ಸ್ಥಳಕ್ಕೆ ಬಂದಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 161/2026ರ ಅಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಮತ್ತು 62 ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.