ಬೆಂಗಳೂರು: ಉದ್ಯಾನ ನಗರಿಯ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ, ಆಕೆಯ ತಾಯಿ ಮತ್ತು ಸಹೋದರನನ್ನು ಬಂಧಿಸುವಲ್ಲಿ ಬೆಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ ಅವರನ್ನು ಗುರುಗ್ರಾಮದಲ್ಲಿ ಬಂಧಿಸಲಾಗಿದ್ದು, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾನನ್ನು ಉತ್ತರ ಪ್ರದೇಶದ ಪ್ರಯಾಗರಾಜ್‌ನಿಂದ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶಕ್ಕೆ ತೆರಳಿರುವ ಮಾರತಹಳ್ಳಿ ಠಾಣೆ ಪೊಲೀಸರ ತಂಡವು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ಮೊದಲು ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸುಭಾಷ್ ಅವರ ಪತ್ನಿಗೆ ಬೆಂಗಳೂರು ನಗರ ಪೊಲೀಸರು ಶುಕ್ರವಾರ ಸಮನ್ಸ್ ಜಾರಿ ಮಾಡಿದ್ದರು.
ಮತ್ತೊಂದೆಡೆ ನಿಕಿತಾ ಮತ್ತು ಆಕೆಯ ಕುಟುಂಬದವರು ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು.ಖಾಸಗಿ ಕಂಪನಿಯ ನಿರ್ದೇಶಕ, ಉತ್ತರ ಪ್ರದೇಶದ ಅತುಲ್ ಸುಭಾಷ್ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದರು. ಸಹೋದರ ಬಿಕಾಸ್ ಕುಮಾರ್ ಅವರು ನೀಡಿದ ದೂರು ಆಧರಿಸಿ ಅತುಲ್ ಸುಭಾಷ್ ಅವರ ಪತ್ನಿ, ಆಕೆಯ ತಾಯಿ, ಸಹೋದರ ಹಾಗೂ ಚಿಕ್ಷಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.