విಟ್ಲ: ಬೋಳಂತೂರಿನ ಉದ್ಯಮಿಯ ಮನೆಯಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ, ಕಾರು, ನಗದು ವಶಪಡಿಸಿಕೊಳ್ಳುವಲ್ಲಿ ದಕ್ಷಿಣ ಕನ್ನಡ ಪೋಲಿಸರು ಯಶಸ್ವಿಯಾಗಿದ್ದಾರೆ.
ಕೇರಳದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ (49) ಬಂಧಿತ ಆರೋಪಿ. ಅನಿಲ್ ಫರ್ನಾಂಡಿಸ್ ನನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ ಎರ್ಟಿಗಾ ಕಾರು, 5 ಲಕ್ಷ ರೂ. ನಗದು ಹಾಗೂ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ ನಂಬರ್ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ 11 ಲಕ್ಷ ರೂ. ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಪ್ರಕರಣದ ಉಳಿದ ಆರೋಪಿಗಳ ಪತ್ತೆ ಕಾರ್ಯ ನಡೆದಿದೆ.
ಜ.30ರಂದು ರಾತ್ರಿ ಬಂಟ್ವಾಳ ತಾಲೂಕಿನ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ 6 ಜನ ಅಪರಿಚಿತರು ಇ.ಡಿ. ಅಧಿಕಾರಿಗಳೆಂದು ನಂಬಿಸಿ, ಮನೆ ಶೋಧ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಿಸಿಕೊಂಡು, ಪೊಲೀಸ್ ಅಧೀಕ್ಷಕ ಯತೀಶ್ ಎನ್ ಅವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.