ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪಂಪ್‌ವೆಲ್-ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಮಾರ್ಚ್ 22ರಂದು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತೊಕ್ಕೊಟ್ಟಿನ ಹೈದರ್ ಅಲಿ (53), ಮೊಹಮ್ಮದ್ ಸಜಾದ್ (29) ಮತ್ತು ಉಡುಪಿ ಮೂಲದ, ಪ್ರಸ್ತುತ ಪಂಪ್‌ವೆಲ್‌ನಲ್ಲಿ ವಾಸವಿರುವ ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ 26 ಗ್ರಾಂ ಎಂಡಿಎಂಎ, 37,000 ರೂಪಾಯಿ ನಗದು, 5 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ ಸೇರಿದಂತೆ ಒಟ್ಟು 4,37,500 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಹೈದರ್ ಅಲಿ ವಿರುದ್ಧ ಈ ಹಿಂದೆ ಮಾದಕ ವಸ್ತು ಮಾರಾಟ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಮುಂದುವರಿದಿದೆ. ಮಂಗಳೂರು ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.