ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡು ಸಮಾಜದ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಯುವಕನೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
2025ನೇ ಸಾಲಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರದ ದಿನಗಳಲ್ಲಿ, 'TN- MADDY' ಎಂಬ ಸಾಮಾಜಿಕ ಜಾಲತಾಣದ ಖಾತೆಯ ಮೂಲಕ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ಮಾಡಲಾಗಿತ್ತು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2025, ಕಲಂ 353 (1), 353(2), 61 (2), 55 ಬಿ.ಎನ್.ಎಸ್. 2023ರಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು, ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯು ಉಡುಪಿ ಜಿಲ್ಲೆಯ ಕಾಪು ತಾಲೂಕು ಮೂಡುಬೆಳ್ಳೆ ಗ್ರಾಮದ ನಿವಾಸಿ, ಬಾಲಕೃಷ್ಣ ಅವರ ಪುತ್ರ 22 ವರ್ಷದ ಪವನ್ ಆಚಾರ್ಯ ಎಂದು ಗುರುತಿಸಿದ್ದಾರೆ.
ಈ ದಿನಾಂಕ 25-03-2026ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಆರೋಪಿಯು ತನ್ನ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಇದೇ ರೀತಿಯ ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲೂ ಅ.ಕ್ರ: 95/2025ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.