ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 12-04-2026 ರಂದು ಸಂಜೆ ಮಾಡ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿಟ್ಲ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸುಮಾರು 20 ರಿಂದ 25 ಜನರ ಗುಂಪು ಜೂಜಾಟದಲ್ಲಿ ತೊಡಗಿರುವುದು ಕಂಡುಬಂದಿದೆ. ಪೊಲೀಸರನ್ನು ಕಂಡ ಕೂಡಲೇ ಹಲವರು ಸ್ಥಳದಿಂದ ಪರಾರಿಯಾಗಿದ್ದು, ವಿಟ್ಲಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಹಾಗೂ ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಕಾರ್ಯಾಚರಣೆಯ ವೇಳೆ ಆರೋಪಿಗಳಾದ ಬಾಬಣ್ಣ ಮತ್ತು ಹೊನ್ನಪ್ಪ ಹರಿಜನ ಎಂಬುವವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ದಾಳಿಯ ವೇಳೆ ಸ್ಥಳದಿಂದ 1,000/- ರೂ. ನಗದು, 3 ಕೋಳಿಗಳು ಹಾಗೂ ಜೂಜಾಟಕ್ಕೆ ಬಳಸಿದ್ದ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 90/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆ, ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಬಿ.ಎನ್.ಎಸ್ (BNS 2023) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.