ಮಂಗಳೂರು: ನಗರದ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾದ ಸುಹಾನಾ (21) ಬಂಧಿತ ಆರೋಪಿತೆ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ. ದಿನಾಂಕ 12-05-2026ರಂದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತಳಿಂದ ಸುಮಾರು 1 ಕೆಜಿ 42 ಗ್ರಾಂ ತೂಕದ ಹೈಡ್ರೋವಿಡ್ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 35,00,000/- ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿತೆಯು ಈ ಮಾದಕ ವಸ್ತುವನ್ನು ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ಬಂಧಿತ ಸುಹಾನಾ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಗಂಭೀರ ಪ್ರಕರಣಗಳು ದಾಖಲಾಗಿವೆ. ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ತಂಡ ಜಂಟಿಯಾಗಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.