ಬರುಯಿಪುರ : ಕೊಲ್ಕತ್ತಾ ಸಮೀಪದ ಬರುಯಿಪುರದಲ್ಲಿ ನಡೆದ 11 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ. ಮೃತ ಆರೋಪಿಯನ್ನು ಪ್ರಭಾಸ್ ಮೊಂಡಲ್ ಎಂದು ಗುರುತಿಸಲಾಗಿದ್ದು, ಮಂಗಳವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರು, ತಡರಾತ್ರಿ ಘಟನಾ ಸ್ಥಳಕ್ಕೆ ಮಹಜರು (ಕ್ರೈಮ್ ಸೀನ್ ರಿಕನ್ಸ್ಟ್ರಕ್ಷನ್) ನಡೆಸಲು ಆರೋಪಿ ಪ್ರಭಾಸ್ ಮೊಂಡಲ್‌ನನ್ನು ಕರೆದೊಯ್ದಿದ್ದರು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ, ಏಕಾಏಕಿ ಅಧಿಕಾರಿಯೊಬ್ಬರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಆರೋಪಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.
ಇಡೀ ಪಶ್ಚಿಮ ಬಂಗಾಳದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಭೀಕರ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಮುಖ್ಯ ಆರೋಪಿಯನ್ನು ಬಂಧಿಸಿದ್ದರು. ಸದ್ಯ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಕಾನೂನು ತನಿಖೆ ಮುಂದುವರಿದಿದೆ.