image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಮಂಗಳೂರು : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ, ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಹತ್ವದ ಯಶಸ್ಸು ಸಾಧಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಕಾನೂನಿನ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಶಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಚೌಡ್ಲಿ ಕಾನ್ವೆಂಟ್ ರಸ್ತೆಯ ನಿವಾಸಿ ಅಬ್ದುಲ್ ನಾಸಿರ್ (41) ಬಂಧಿತ ಆರೋಪಿಗಳಾಗಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಜುಲೈ 11 ರಂದು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಐಎ ಅಧಿಕಾರಿಗಳು, ನೌಶಾದ್‌ನನ್ನು ಬೆಂಗಳೂರಿನಲ್ಲಿ ಹಾಗೂ ಅಬ್ದುಲ್ ನಾಸಿರ್‌ನನ್ನು ಕೇರಳದ ಕೊಚ್ಚಿಯಲ್ಲಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರೂ ಆರೋಪಿಗಳ ಪತ್ತೆಗಾಗಿ ಎನ್‌ಐಎ ತೀವ್ರ ಶೋಧ ನಡೆಸುತ್ತಿತ್ತು. ಇವರ ಬಗ್ಗೆ ಸುಳಿವು ನೀಡಿದವರಿಗೆ ತಲಾ 2 ಲಕ್ಷ ರೂಪಾಯಿ ಇನಾಮು ನೀಡುವುದಾಗಿಯೂ ಪ್ರಕಟಿಸಲಾಗಿತ್ತು.

ಈ ಭೀಕರ ಕೊಲೆ ಪ್ರಕರಣದಲ್ಲಿ ಒಟ್ಟು 28 ಮಂದಿಯನ್ನು ಆರೋಪಿಗಳೆಂದು ಗುರುತಿಸಲಾಗಿದ್ದು, ಸದ್ಯ ಇಬ್ಬರ ಬಂಧನದೊಂದಿಗೆ ಜೈಲು ಸೇರಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಇಬ್ಬರು ಪ್ರಮುಖ ಆರೋಪಿಗಳು ಸಿಕ್ಕಿಬಿದ್ದಿರುವುದರಿಂದ ಪ್ರಕರಣದ ತನಿಖೆಗೆ ಮತ್ತಷ್ಟು ವೇಗ ಸಿಕ್ಕಂತಾಗಿದೆ. ಇನ್ನುಳಿದ ಐವರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು ತಮ್ಮ ಜಾಲವನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

Category
ಕರಾವಳಿ ತರಂಗಿಣಿ