image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಂತರ್ ಮಂತರ್‌ನಲ್ಲಿ FRS ಮೂಲಕ 2,500ಕ್ಕೂ ಹೆಚ್ಚು ಅಪರಾಧಿ ಹಿನ್ನೆಲೆಯುಳ್ಳವರ ಗುರುತು

ಜಂತರ್ ಮಂತರ್‌ನಲ್ಲಿ FRS ಮೂಲಕ 2,500ಕ್ಕೂ ಹೆಚ್ಚು ಅಪರಾಧಿ ಹಿನ್ನೆಲೆಯುಳ್ಳವರ ಗುರುತು

ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಯ ವೇಳೆ ಉಂಟಾದ ಹಿಂಸಾಚಾರದ ಬಳಿಕ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ದೆಹಲಿ ಪೊಲೀಸರು ಅಳವಡಿಸಿರುವ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ (FRS) ಜುಲೈ 21ರಿಂದ 23ರ ಅವಧಿಯಲ್ಲಿ 2,500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಗುರುತಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರ ನಡುವೆ ಬೆರೆತು ಬಂದಿದ್ದ ಕೆಲ ದುಷ್ಕರ್ಮಿಗಳು ಚಾಕು ಮತ್ತಿತರ ಹರಿತವಾದ ಆಯುಧಗಳಿಂದ ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಮುಖ ಪ್ರವೇಶ ಹಾಗೂ ನಿರ್ಗಮನ ದ್ವಾರಗಳಲ್ಲಿ ನಾಲ್ಕು FRS ಘಟಕಗಳನ್ನು ಅಳವಡಿಸಲಾಗಿದೆ. ಈ ವ್ಯವಸ್ಥೆಯನ್ನು ದೆಹಲಿ ಪೊಲೀಸ್ ಡೇಟಾಬೇಸ್‌ಗೆ ಸಂಪರ್ಕಿಸಲಾಗಿದ್ದು, ರಿಯಲ್-ಟೈಮ್‌ನಲ್ಲಿ ರೌಡಿಶೀಟರ್‌ಗಳು ಹಾಗೂ ಬೇಕಾಗಿರುವ ಅಪರಾಧಿಗಳನ್ನು ತಕ್ಷಣವೇ ಪತ್ತೆ ಹಚ್ಚಲಾಗುತ್ತಿದೆ.

ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿರೋಧ ಪಕ್ಷಗಳ ಬೆಂಬಲದೊಂದಿಗೆ ನಡೆದ ‘ಸಂಸತ್ ಚಲೋ’ ಮೆರವಣಿಗೆಯನ್ನು ಪೊಲೀಸರು ತಡೆದಾಗ ಘರ್ಷಣೆ ಸಂಭವಿಸಿ, ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿ ಜನರನ್ನು ಚದುರಿಸಿದ್ದರು. ಈ ಘಟನೆಯಲ್ಲಿ ಹಲವು ಪ್ರತಿಭಟನಾಕಾರರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದವರ ವಿರುದ್ಧ ಪೊಲೀಸರು ಈಗಾಗಲೇ 15 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

NEET ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಈ ಚಳವಳಿಗೆ ಬೆಂಬಲವಾಗಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಮಾತುಕತೆಯ ಬಳಿಕ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಮತ್ತೊಂದೆಡೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

Category
ಕರಾವಳಿ ತರಂಗಿಣಿ