ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ, ಪದೇ ಪದೇ ಅತ್ಯಾಚಾರ ಎಸಗುವುದಲ್ಲದೆ, ನಗ್ನ ಚಿತ್ರಗಳನ್ನು ಸಂಗ್ರಹಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದ ಪ್ರಕರಣದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-2) 20 ವರ್ಷಗಳ ಕಠಿಣ ಕಾರವಾಸ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅ.ಕ್ರ. 130/2025 ಪ್ರಕರಣದ ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ (20), ತಂದೆ: ಗಿಲ್ಬರ್ಟ್ ನೊರೊನ್ಹ, ದೇವಿ ನಗರ, ಕುಂಜತ್ತ ಬೈಲ್, ಮಂಗಳೂರು ಎಂಬಾತನೇ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.
ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹನು 2024ರ ಫೆಬ್ರವರಿಯಿಂದ ನೊಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಮನವೊಲಿಸಿದ್ದನು. ಬಳಿಕ ಬಾಲಕಿ ಬಾಡಿಗೆಯಲ್ಲಿದ್ದ ಶಕ್ತಿನಗರದ ಚಾಲುಕ್ಯ ಬಾರ್ ಹತ್ತಿರದ ಮನೆ ಹಾಗೂ ಅಳಪೆ ಗ್ರಾಮದ ಕೆಂಬಾರು ಕೆ.ಇ.ಬಿ. ಮುಂಭಾಗದ ಮನೆಯಲ್ಲಿ 2024ರ ಸೆಪ್ಟೆಂಬರ್‌ನಿಂದ 2025ರ ಜೂನ್ ಮಧ್ಯೆ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದನು.
ಅಲ್ಲದೆ, ಬಾಲಕಿ ಸ್ನಾನಗೃಹದಲ್ಲಿ ನಗ್ನವಾಗಿರುವಾಗ ವೀಡಿಯೊ ಕಾಲ್ ಮಾಡಿ ಸ್ಕ್ರೀನ್ ಶಾಟ್ ಮೂಲಕ ನಗ್ನ ಚಿತ್ರಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದನು. ಮುಂದುವರಿದು, ದೈಹಿಕ ಸಂಪರ್ಕಕ್ಕೆ ಬಾರದಿದ್ದರೆ ಈ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಹಾಗೂ ಬಾಲಕಿ, ಆಕೆಯ ತಾಯಿ ಮತ್ತು ಅಕ್ಕನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದನು.
ಈ ಗಂಭೀರ ಪ್ರಕರಣದ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ನಿರೀಕ್ಷಕರಾದ ಟಿ.ಡಿ. ನಾಗರಾಜ್ ಅವರು ಸಮಗ್ರ ತನಿಖೆ ನಡೆಸಿ, ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಸಹನಾ ದೇವಿ ಅವರು ವಾದ ಮಂಡಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದ್ದರಿಂದ ಭಾರತೀಯ ನ್ಯಾಯ ಸಂಹಿತೆ (BNS), ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಈ ಶಿಕ್ಷೆ ವಿಧಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.