ಮಂಗಳೂರು: ನಗರದ ಕಾಲೇಜೊಂದರ ಪ್ರಥಮ ವರ್ಷದ ವಿದ್ಯಾರ್ಥಿಗಳಿಬ್ಬರ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಗುಜ್ಜರಕೇರೆಯ ಬಳಿ ಮಂಗಳವಾರ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ನಗರದ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದು, ಮೇಲ್ನೋಟಕ್ಕೆ ಇದೊಂದು ರಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ.
ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿಗಳ ಮೇಲೆ, ದ್ವಿತೀಯ ವರ್ಷದ ಸುಮಾರು ನಾಲ್ವರು ಹಿರಿಯ ವಿದ್ಯಾರ್ಥಿಗಳು ಗುಜ್ಜರಕೇರೆಯ ಚಹಾ ಅಂಗಡಿಯೊಂದರ ಬಳಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಸಮಗ್ರ ತನಿಖೆ ನಡೆಸಲಾಗುವುದು. ತನಿಖೆಯ ನಂತರವೇ ಬಳಿಕ ಸಂಪೂರ್ಣ ಸತ್ಯಾಸತ್ಯತೆ ಹೊರಬರಲಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.