image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ನೈಸ್ ಯೋಜನೆ ಅಕ್ರಮ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ನೈಸ್ ಯೋಜನೆ ಅಕ್ರಮ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಬೆಂಗಳೂರು: ನಂದಿ ಇನ್ಫಾಸ್ಟ್ರಕ್ಚರ್‌ ಕಾರಿಡಾರ್‌ (ನೈಸ್‌) ರಸ್ತೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಸಂಜಯ್‌ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಿತು. ಪ್ರಕರಣವನ್ನು ಸಂಪೂರ್ಣವಾಗಿ ಪರಿಶೀಲಿಸುವವರೆಗೂ ಯಾವುದೇ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್‌ 2ಕ್ಕೆ ಮುಂದೂಡಿದೆ. ಸುಪ್ರೀಂ ಕೋರ್ಟ್‌ನ ಈ ನಿರ್ಧಾರದಿಂದಾಗಿ ಹೈಕೋರ್ಟ್‌ ನಿರ್ದೇಶನದಂತೆ ಭೂಸ್ವಾಧೀನ ಅಕ್ರಮಗಳ ಕುರಿತ ತನಿಖೆ ತಡೆಯಿಲ್ಲದೆ ಮುಂದುವರಿಯಲಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ನೈಸ್‌ ರಸ್ತೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮಾಡಿಕೊಂಡಿದ್ದ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಿತ್ತು. ರಾಜ್ಯ ಸರ್ಕಾರದ ಪೂರ್ವ ಅನುಮತಿಯಿಲ್ಲದೆ ಟೋಲ್‌ ದರ ಹೆಚ್ಚಿಸಿ ಭಾರಿ ಲಾಭ ಗಳಿಸಿರುವುದು, ರೈತರಿಗೆ ಸರಿಯಾದ ಪರಿಹಾರ ನೀಡದೆ ಭೂಮಿ ವಶಕ್ಕೆ ಪಡೆದಿರುವುದು ಹಾಗೂ ಕೆರೆ-ಜಲಮೂಲಗಳನ್ನು ಅತಿಕ್ರಮಿಸಿ ಪರಿಸರ ಮತ್ತು ಜೀವವೈವಿಧ್ಯಕ್ಕೆ ಹಾನಿ ಉಂಟು ಮಾಡಿರುವುದನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿತ್ತು. ಈ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ಹಾಗೂ ಫೋರೆನ್ಸಿಕ್‌ ಆಡಿಟ್‌ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

Category
ಕರಾವಳಿ ತರಂಗಿಣಿ