image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಭಾರತ ಭೇಟಿ: ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಮಹತ್ವದ ಮಾತುಕತೆ

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಭಾರತ ಭೇಟಿ: ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಮಹತ್ವದ ಮಾತುಕತೆ

ಮುಂಬೈ : ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಾರ್ಕೊ ರುಬಿಯೊ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿರುವುದು ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮುಂಬೈಗೆ ಆಗಮಿಸಿರುವ ಅವರಿಗೆ ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸರ್ಗಿಯೊ ಗೋರ್ ಅವರು ಅತ್ಯಂತ ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಯಭಾರಿ ಗೋರ್, "ನನ್ನ ಸ್ನೇಹಿತ ಮಾರ್ಕೊ ರುಬಿಯೊ ಮತ್ತೆ ಮುಂಬೈಗೆ ಆಗಮಿಸುತ್ತಿರುವುದು ನನಗೆ ಅಪಾರ ಖುಷಿ ತಂದಿದೆ. ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಗೆ ಹಾಗೂ ಈ ಭೇಟಿಯ ಫಲಪ್ರದ ಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ" ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಮತ್ತೊಂದು ಪ್ರತ್ಯೇಕ ಪೋಸ್ಟ್‌ನಲ್ಲಿ ಅವರು ಮಾರ್ಕೊ ರುಬಿಯೊ ಹಾಗೂ ಅವರ ಪತ್ನಿ ಜಾನೆಟ್ ಡೌಸ್‌ಡೆಬೆಸ್ ರೂಬಿಯೊ ಅವರಿಗೆ ಭಾರತಕ್ಕೆ ಆತ್ಮೀಯ ಸ್ವಾಗತ ಕೋರಿದ್ದಾರೆ.

ಈ ಭೇಟಿಯ ಪ್ರಮುಖ ಭಾಗವಾಗಿ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಅಮೆರಿಕದ ಸಚಿವರ ಉನ್ನತ ಮಟ್ಟದ ನಿಯೋಗ ಕೂಡ ಭಾಗಿಯಾಗಲಿದೆ. ಉಭಯ ನಾಯಕರು ವಿಶೇಷವಾಗಿ ವ್ಯಾಪಾರ ಮತ್ತು ವಾಣಿಜ್ಯ ಸಂಬಂಧಗಳು, ಇಂಧನ (ಶಕ್ತಿ) ವಲಯ, ರಾಷ್ಟ್ರೀಯ ಭದ್ರತೆ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ಹೆಚ್ಚಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಿದ್ದಾರೆ. ಜಾಗತಿಕ ಸವಾಲುಗಳನ್ನು ಎದುರಿಸಲು ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡಲು ಈ ಮಾತುಕತೆ ಅತ್ಯಂತ ನಿರ್ಣಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಮಾರ್ಕೊ ರುಬಿಯೊ ಅವರ ಈ ಆಗಮನವನ್ನು ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕೂಡ ಮುಕ್ತ ಮನಸ್ಸಿನಿಂದ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಜೈಶಂಕರ್, ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಮಾರ್ಕೊ ರುಬಿಯೊ ಅವರು ವ್ಯಕ್ತಪಡಿಸಿರುವ ಸಕಾರಾತ್ಮಕ ಭಾವನೆಗಳನ್ನು ಮತ್ತು ಅಚಲ ಆಸಕ್ತಿಯನ್ನು ತಾವು ಹೃತ್ಪೂರ್ವಕವಾಗಿ ಶ್ಲಾಘಿಸುವುದಾಗಿ ತಿಳಿಸಿದ್ದಾರೆ. ಈ ಭೇಟಿಯು ಮುಂಬರುವ ದಿನಗಳಲ್ಲಿ ವಿಶ್ವದ ಅತಿ ದೊಡ್ಡ ಹಾಗೂ ಅತ್ಯಂತ ಹಳೆಯ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ವಿಶ್ವಾಸವನ್ನು ಉಭಯ ನಾಯಕರು ವ್ಯಕ್ತಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ