image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಸಿಜೆಐ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೆಪಿಸಿಸಿ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್

ಸಿಜೆಐ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೆಪಿಸಿಸಿ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್

ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಮುಖ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕಾರಣ ಕೇಳಿ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷದ ಪರವಾಗಿ ಬೇಷರತ್ ಕ್ಷಮಾಪಣೆ ಕೋರಲಾಗಿದ್ದರೂ, ನ್ಯಾಯಾಲಯವು ಅದರ ಪ್ರಾಮಾಣಿಕತೆಯನ್ನು ಪ್ರಶ್ನಿಸಿದೆ. ಸಂವಿಧಾನದ ವಿಧಿ 139ರ ಅಡಿಯಲ್ಲಿ ನ್ಯಾಯಾಂಗ ನಿಂದನೆ ನಡಾವಳಿಗಳನ್ನು ಏಕೆ ಪ್ರಾರಂಭಿಸಬಾರದು ಎಂದು ನ್ಯಾಯಪೀಠ ಕೇಳಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಅಕ್ಟೋಬರ್ 12ರಂದು ಕೇರಳ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪ್ರಕಟವಾಗಿದ್ದ ಪೋಸ್ಟ್‌ಗೆ ಸಂಬಂಧಿಸಿದ ನಿಂದನೆ ಅರ್ಜಿಯ ವಿಚಾರಣೆ ನಡೆಸಿತು. "ನ್ಯಾಯಾಂಗದ ಸ್ವಾತಂತ್ರ್ಯವು ರಾಜಕೀಯ ಅನುಕೂಲದ ವಿಷಯವಲ್ಲ. ಸಂವಿಧಾನವೇ ಶ್ರೇಷ್ಠ ಹಾಗೂ ಯಾವುದೇ ವ್ಯಕ್ತಿ ಅಥವಾ ರಾಜಕೀಯ ಸಂಘಟನೆ ಸಂವಿಧಾನಕ್ಕಿಂತ ಮಿಗಿಲಾದುದಲ್ಲ" ಎಂದು ನ್ಯಾಯಪೀಠ ತೀವ್ರ ಗಂಭೀರವಾಗಿ ಎಚ್ಚರಿಸಿದೆ.

ಈ ವಿಚಾರಣೆ ವೇಳೆ ಕೇರಳ ಕಾಂಗ್ರೆಸ್ ಪರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ನಿಮ್ಮ ಅಫಿಡವಿಟ್ ಕೇವಲ ಪೆನ್ನಿನಿಂದ ಬಂದಿದೆಯೋ ಅಥವಾ ನಿಮ್ಮ ಹೃದಯಾಂತರಾಳದಿಂದ ಬಂದಿದೆಯೋ ಎಂಬುದನ್ನು ನಾವು ಪರಿಶೀಲಿಸುತ್ತೇವೆ" ಎಂದು ನೇರವಾಗಿ ಹೇಳಿತು. ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಅನುಮತಿ ಅಥವಾ ಒಪ್ಪಿಗೆಯಿಲ್ಲದೆ ಈ ಪೋಸ್ಟ್ ಅನ್ನು ಹಂಚಿಕೊಳ್ಳಲಾಗಿತ್ತು ಎಂದು ಕಾಂಗ್ರೆಸ್ ಪರ ವಕೀಲರು ವಾದ ಮಂಡಿಸಿದರು. ಮರುದಿನವೇ ಮಾಧ್ಯಮ ಪ್ರಕಟಣೆ ಹೊರಡಿಸಿ, ವಿವಾದಾತ್ಮಕ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದೆ ಎಂದು ಕೋರ್ಟ್‌ಗೆ ವಿವರಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ' ಮೈತ್ರಿಕೂಟವು ಸುಪ್ರೀಂ ಕೋರ್ಟ್‌ಗೆ ನಡೆಸಿದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಈ ವಿವಾದ ಸೃಷ್ಟಿಯಾಗಿತ್ತು. ಕಾನೂನಾತ್ಮಕ ಕಾರಣಗಳಿಂದಾಗಿ ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾಗಲು ಸಾಧ್ಯವಿಲ್ಲ ಎಂಬ ಸಿಜೆಐ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಕೇರಳ ಕಾಂಗ್ರೆಸ್, "ಆತ್ಮೀಯ ಸೂರ್ಯ ಕಾಂತ್ ಅವರೇ, ಕಾನೂನು ಮತ್ತು ಸುವ್ಯವಸ್ಥೆ ನಿಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದಾದರೆ ತಕ್ಷಣವೇ ರಾಜೀನಾಮೆ ನೀಡಿ, ಅದನ್ನು ನಿರ್ವಹಿಸಬಲ್ಲ ಮತ್ತೊಬ್ಬರನ್ನು ನಾವು ಹುಡುಕಿಕೊಳ್ಳುತ್ತೇವೆ" ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿತ್ತು. ಭಾರಿ ವಿರೋಧ ಮತ್ತು ವಕೀಲರ ಸಂಘಗಳ ಖಂಡನೆಯ ನಂತರ ಆ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿತ್ತು.

Category
ಕರಾವಳಿ ತರಂಗಿಣಿ