ನವದೆಹಲಿ: ರಾಷ್ಟ್ರೀಯ ಹೆಚ್ಪಿವಿ (HPV) ಲಸಿಕಾ ಅಭಿಯಾನ ಪ್ರಾರಂಭವಾದ ಒಂಬತ್ತು ತಿಂಗಳಿಗಿಂತ ಕಡಿಮೆ ಅವಧಿಯಲ್ಲೇ ದೇಶಾದ್ಯಂತ 1 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡುವ ಮೂಲಕ ಭಾರತ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಮತ್ತು ಹದಿಹರೆಯದ ಬಾಲಕಿಯರನ್ನು ಹೆಚ್ಪಿವಿ ಸೋಂಕಿನಿಂದ ರಕ್ಷಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ.
2026ರ ಫೆಬ್ರವರಿ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಇದರಡಿ 14 ವರ್ಷ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ಪೋಷಕರ ಸಮ್ಮತಿಯೊಂದಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸುರಕ್ಷಿತ ಹಾಗೂ ಉಚಿತ ಸಿಂಗಲ್ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ, ಅಭಿಯಾನದಲ್ಲಿ ಶೇ. 100ರಷ್ಟು ಗುರಿ ಸಾಧಿಸಿರುವ ಬಿಹಾರ, ಮಧ್ಯಪ್ರದೇಶ, ಮಿಜೋರಾಂ, ಆಂಧ್ರಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಳಿದಂತೆ 12 ರಾಜ್ಯಗಳು ಶೇ. 80ರಷ್ಟು ಪ್ರಗತಿ ಸಾಧಿಸಿದ್ದು, ಭವಿಷ್ಯದ ಮಹಿಳೆಯರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಸಾಧನೆ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.