ಮುಂಬೈ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ 'ಕಮಾಂಡರ್-ಇನ್-ಥೀಫ್' (ಕಳ್ಳರ ಸರದಾರ) ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ 2019 ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಅನ್ನು ರದ್ದುಗೊಳಿಸಲು ಮುಂಬೈ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.
ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ಅವರು, ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ಆದೇಶದಲ್ಲಿ ಯಾವುದೇ ಅಕ್ರಮ ಅಥವಾ ದೋಷ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿ ಅವರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಮುಂದಿನ ಆರು ವಾರಗಳ ಕಾಲ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ.
2018 ರಲ್ಲಿ ರಫೇಲ್ ಯುದ್ಧ ವಿಮಾನ ಒಪ್ಪಂದಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತ ಎಂ.ಹೆಚ್. ಶ್ರೀಶ್ರೀಮಾಲ್ ಎಂಬುವವರು ಗಿರ್ಗಾಮ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ವಿಚಾರಣೆ ವೇಳೆ ರಾಹುಲ್ ಗಾಂಧಿ ಪರ ವಕೀಲರು, ದೂರುದಾರರು ಈ ಪ್ರಕರಣದಲ್ಲಿ ನೇರ ಸಂತ್ರಸ್ತರಲ್ಲದ ಕಾರಣ ದೂರು ನೀಡಲು ಅವರಿಗೆ ಕಾನೂನುಬದ್ಧ ಹಕ್ಕಿಲ್ಲ (Locus Standi) ಎಂದು ವಾದಿಸಿದ್ದರು. ಆದರೆ ದೂರುದಾರರ ವಾದವನ್ನು ಪುರಸ್ಕರಿಸಿದ ನ್ಯಾಯಪೀಠವು, ಪ್ರಧಾನಿ ಮೋದಿ ಅವರು ಬಿಜೆಪಿಯ ಪ್ರಮುಖ ಮುಖವಾಗಿದ್ದು, ಅವರ ವಿರುದ್ಧದ ಕಳ್ಳತನದ ಆರೋಪವು ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಈ ಹೇಳಿಕೆಯು ಕೇವಲ ವೈಯಕ್ತಿಕವೇ ಅಥವಾ ಪಕ್ಷಕ್ಕೂ ಅನ್ವಯಿಸುತ್ತದೆಯೇ ಎಂಬುದನ್ನು ವಿಚಾರಣೆ ಹಂತದಲ್ಲಷ್ಟೇ ತೀರ್ಮಾನಿಸಲು ಸಾಧ್ಯ ಎಂದು ಹೇಳಿರುವ ಹೈಕೋರ್ಟ್, ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದೆ.