image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಸಿಇಸಿ ವಿರುದ್ಧ ಕಾಂಗ್ರೆಸ್ ಸಮರ: ಬಿಜೆಪಿ ಭಾರಿ ತಿರುಗೇಟು

ಸಿಇಸಿ ವಿರುದ್ಧ ಕಾಂಗ್ರೆಸ್ ಸಮರ: ಬಿಜೆಪಿ ಭಾರಿ ತಿರುಗೇಟು

ನವದೆಹಲಿ : ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕತ್ವ ತೀವ್ರ ಹೋರಾಟ ಆರಂಭಿಸಿದ್ದು, ಆಡಳಿತಾರೂಢ ಬಿಜೆಪಿ ಇದಕ್ಕೆ ಸಡ್ಡು ಹೊಡೆಯಲು ಬೃಹತ್ ಕಾರ್ಯತಂತ್ರ ರೂಪಿಸಿದೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ಏಕಪಕ್ಷೀಯವಾಗಿ ಕೈಗೊಳ್ಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ದೇಶವ್ಯಾಪಿ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಕರೆ ನೀಡಿದೆ. ಇದಕ್ಕೆ ಪ್ರತಿಯಾಗಿ, ಬಿಜೆಪಿ ತನ್ನ 12 ರಾಜ್ಯಗಳ ಮುಖ್ಯಮಂತ್ರಿಗಳನ್ನು ಏಕಕಾಲಕ್ಕೆ ಮಾಧ್ಯಮಗೋಷ್ಠಿಗೆ ಇಳಿಸಿ ಕಾಂಗ್ರೆಸ್ ವಿರುದ್ಧ ಪ್ರಬಲ ವಾಗ್ದಾಳಿ ನಡೆಸಲು ಸಜ್ಜಾಗಿದೆ. ವಿಪಕ್ಷಗಳು ಯಾವುದೇ ಆಧಾರವಿಲ್ಲದೆ ಸಂವಿಧಾನಾತ್ಮಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ಮತ್ತು ದೇಶದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿವೆ ಎಂದು ಬಿಜೆಪಿ ಆಪಾದಿಸಿದೆ.

ಎಸ್‌ಐಆರ್ ಮತ್ತು ಇತರ ಪ್ರಮುಖ ವಿಚಾರಗಳಿಗೆ ಸಂಬಂಧಿಸಿದಂತೆ ಕಳೆದ 10 ತಿಂಗಳುಗಳಲ್ಲಿ ಚುನಾವಣಾ ಆಯೋಗದ ಇಬ್ಬರು ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರು ಕನಿಷ್ಠ 14 ನಿರ್ಧಾರಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಮಾಧ್ಯಮ ವರದಿ ಬಹಿರಂಗಗೊಂಡ ಬೆನ್ನಲ್ಲೇ ಈ ರಾಜಕೀಯ ವಿವಾದ ತೀವ್ರಗೊಂಡಿದೆ. ಈ ವರದಿಯನ್ನೇ ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ, ಮತಗಳ ಕಳವು ಆರೋಪ ಸಾಬೀತಾಗಿದೆ ಎಂದು ಪ್ರತಿಪಾದಿಸಿದ್ದು, ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ದೇಶದ್ರೋಹದ ಆಧಾರದಲ್ಲಿ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು 1,000ಕ್ಕೂ ಹೆಚ್ಚು ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರೊಂದಿಗೆ ವರ್ಚುವಲ್ ಸಭೆ ನಡೆಸಿ ದೇಶವ್ಯಾಪಿ ಸುದೀರ್ಘ ಪ್ರತಿಭಟನೆಗೆ ತಂತ್ರ ರೂಪಿಸಿದ್ದಾರೆ.

ಆಂತರಿಕ ಚರ್ಚೆಗಳ ಸಮಯದಲ್ಲಿ ವಿಭಿನ್ನ ಅಭಿಪ್ರಾಯಗಳು ಬರುವುದು ಸಹಜ ಪ್ರಕ್ರಿಯೆಯಾಗಿದ್ದು, ಅಂತಿಮವಾಗಿ ಕೈಗೊಳ್ಳಲಾದ ಎಲ್ಲಾ ನಿರ್ಧಾರಗಳು ಒಮ್ಮತದ ತೀರ್ಮಾನಗಳೇ ಆಗಿವೆ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಈ ಸತ್ಯಾಂಶವನ್ನು ಮರೆಮಾಚಿ ಕಾಂಗ್ರೆಸ್ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ನಿರ್ಧಾರ ಹಾಗೂ 'ಇಂಡಿಯಾ' ಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Category
ಕರಾವಳಿ ತರಂಗಿಣಿ