ನವದೆಹಲಿ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವಕೀಲರ ತಂಡವೊಂದನ್ನು ದೆಹಲಿ ಪೊಲೀಸ್ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಭಾರತೀಯ ಸರ್ವೋಚ್ಛ ನ್ಯಾಯಾಲಯದ (ಸುಪ್ರೀಂ ಕೋರ್ಟ್) ಬಳಿ ಬಂಧಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದ ಕೇವಲ 100 ಗಜಗಳಷ್ಟು ದೂರ ಸಾಗುತ್ತಿದ್ದಂತೆ ವಕೀಲರನ್ನು ತಡೆದ ಭದ್ರತಾ ಸಿಬ್ಬಂದಿ, ನಂತರ ಅವರನ್ನು ಬಸ್‌ಗಳಲ್ಲಿ ಹತ್ತಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧಿತ ವಕೀಲರ ನಿಖರ ಸಂಖ್ಯೆ, ಬಂಧನಕ್ಕೆ ನೀಡಲಾದ ಅಧಿಕೃತ ಕಾರಣಗಳು ಹಾಗೂ ಅವರ ಬಿಡುಗಡೆಯ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ನೂತನವಾಗಿ ಮತದಾರರ ಹೆಸರು ಸೇರ್ಪಡೆಗೆ ಬಳಸುವ 'ಫಾರ್ಮ್ 6'ಗೆ ಸಂಬಂಧಿಸಿದ ಬದಲಾವಣೆಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಈ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಾದ್ಯಂತ ಪೊಲೀಸರು ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ.