image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಗ್ರಂಥಾಲಯ ಪುಸ್ತಕ ಖರೀದಿ ಹಗರಣ: ತಕ್ಷಣ ಎಫ್‌ಐಆರ್ ದಾಖಲಿಸಲು ಡಿವಿಎಸಿಗೆ ಹೈಕೋರ್ಟ್ ಆದೇಶ

ಗ್ರಂಥಾಲಯ ಪುಸ್ತಕ ಖರೀದಿ ಹಗರಣ: ತಕ್ಷಣ ಎಫ್‌ಐಆರ್ ದಾಖಲಿಸಲು ಡಿವಿಎಸಿಗೆ ಹೈಕೋರ್ಟ್ ಆದೇಶ

ಚೆನ್ನೈ : ತಮಿಳುನಾಡಿನ ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸುವ ಪ್ರಕ್ರಿಯೆಯಲ್ಲಿ ನಡೆದಿರುವ ಬೃಹತ್ ಭ್ರಷ್ಟಾಚಾರ ಹಾಗೂ ಅಕ್ರಮಗಳ ಕುರಿತು ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಮಂಗಳವಾರ ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯಕ್ಕೆ (ಡಿವಿಎಸಿ) ಆದೇಶ ನೀಡಿದೆ.

ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಪಾರದರ್ಶಕವಾಗಿ ಖರೀದಿಸುವಂತೆ 2024ರ ಜೂನ್ 19ರಂದು ಹೈಕೋರ್ಟ್ ನೀಡಿದ್ದ ಸ್ಪಷ್ಟ ನಿರ್ದೇಶನಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ರಾಮಸುಬ್ಬು ಎಂಬುವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ಎಂ.ಡಿ. ಸುಮತಿ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ನಿರ್ದೇಶನ ಹೊರಡಿಸಿದೆ.

ಈ ವಂಚನೆಯಲ್ಲಿ ಪ್ರಮುಖವಾಗಿ ಭಾಗಿಯಾಗಿರುವ 'ಅಗಲ್ ವಿಲಕ್ಕು ಪಬ್ಲಿಕೇಷನ್ಸ್', ಅದರ ಮಾಲೀಕ ಮೋಹನ್ ಹಾಗೂ ಇತರರ ಬ್ಯಾಂಕ್ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ (ಫ್ರೀಜ್) ನ್ಯಾಯಾಲಯ ಸೂಚಿಸಿದೆ. ಜೊತೆಗೆ, ಅಕ್ರಮ ಖರೀದಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಶಿಸ್ತುಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕಳೆದ ಎರಡು ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳಿಂದ ಈ ಖರೀದಿ ಪ್ರಕ್ರಿಯೆಗೆ ಕಾರಣರಾದ ಎಲ್ಲಾ ಅಧಿಕಾರಿಗಳನ್ನು ಗುರುತಿಸಿ ಅವರ ಸಮಗ್ರ ವಿವರಗಳನ್ನು ಸಲ್ಲಿಸುವಂತೆ ಸಾರ್ವಜನಿಕ ಗ್ರಂಥಾಲಯಗಳ ನಿರ್ದೇಶಕರಿಗೆ ಆದೇಶಿಸಲಾಗಿದೆ.

ಕೊಯಮತ್ತೂರಿನಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ 'ಪೆರಿಯಾರ್ ವರ್ಲ್ಡ್​ ನಾಲೆಡ್ಜ್ ಲೈಬ್ರರಿ'ಗೆ ಎಐ (ಕೃತಕ ಬುದ್ಧಿಮತ್ತೆ) ಮೂಲಕ ರಚಿಸಲಾದ ನಕಲಿ ಲೇಖಕರ ಹೆಸರಿನ ಪುಸ್ತಕಗಳನ್ನು ಹೆಚ್ಚಿನ ಬೆಲೆಗೆ ಖರೀದಿಸಿರುವುದು ಸೇರಿದಂತೆ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವು ಈಗಾಗಲೇ ತನಿಖೆಗೆ ಆದೇಶಿಸಿದೆ.

Category
ಕರಾವಳಿ ತರಂಗಿಣಿ