ಮುಂಬೈ : ಅತ್ಯಾಚಾರ ಆರೋಪಿ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಜತೆಗೆ ನಂಟು ಹೊಂದಿರುವ ಆರೋಪದ ಮೇಲೆ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎನ್‌ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್, ಉಪಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ, ಅವರು ಶುಕ್ರವಾರ ಸಂಜೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ರಾಜೀನಾಮೆ ನೀಡುವಂತೆ ಅವರು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ಚಕಂಕರ್ ಅವರು ಫಡಣವೀಸ್‌ಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2024ರ ಅಕ್ಟೋಬರ್ 15 ರಂದು ಅವರನ್ನು ಈ ಹುದ್ದೆಗೆ( ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ) ನೇಮಕ ಮಾಡಲಾಗಿತ್ತು. 'ವೈಯಕ್ತಿಕ ಕಾರಣಗಳಿಂದ ನಾನು ಈ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ರಾಜ್ಯ ಸರ್ಕಾರ ಮತ್ತು ಸಹೋದ್ಯೋಗಿಗಳ ಸಹಕಾರಕ್ಕೆ ಧನ್ಯವಾದ' ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರೂಪಾಲಿ ಚಕಂಕರ್ ಅವರು, ಅಶೋಕ್ ಖರತ್ ಜತೆಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಡಿದ್ದವು. ಇದು ರಾಜಕೀಯ ವಿವಾದಕ್ಕೆ ತಿರುಗಿ, ಚಕಂಕರ್ ಅವರು ರಾಜೀನಾಮೆ ನೀಡುವಂತೆ ವಿರೋಧ ಪಕ್ಷದ ನಾಯಕರು ಆಗ್ರಹಿಸಿದ್ದರು. ಮಹಿಳೆಯರಿಗೆ ನ್ಯಾಯ ಒದಗಿಸಬೇಕಾದ ಸಾಂವಿಧಾನಿಕ ಸ್ಥಾನದಲ್ಲಿರುವವರು ಇಂತಹ ಆರೋಪಿಯೊಂದಿಗೆ ನಿಕಟ ಸಂಬಂಧ ಹೊಂದಿರುವುದು ನೈತಿಕವಾಗಿ ಸರಿಯಲ್ಲ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್, ವಕ್ತಾರೆ ಸುಷ್ಮಾ ಅಂಧಾರೆ ಪ್ರತಿಪಾದಿಸಿದ್ದರು. ಜ್ಯೋತಿಷಿ ಎಂದು ಹೇಳಿಕೊಳ್ಳುವ ಖರತ್‌ನ ಪ್ರಭಾವದಿಂದ, ಚಕಂಕರ್ ಮಾಂತ್ರಿಕ ಆಚರಣೆಯ ಭಾಗವಾಗಿ ತನ್ನ ಉಂಗುರ ಬೆರಳನ್ನು ಕತ್ತರಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸುಷ್ಮಾ ಅಂಧಾರೆ, ಚಕಂಕರ್ ಅವರು ಉಂಗುರ ಬೆರಳಿಗೆ ಬ್ಯಾಂಡೇಜ್ ಹಾಕಿಕೊಂಡಿರುವ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.