ನವದೆಹಲಿ : ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಈ ಕುರಿತು ನ್ಯಾಯಮಂಡಳಿ (Tribunal) ರಚಿಸಲು ಕೇಂದ್ರ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ವಿಸ್ತರಿಸಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಈ ದೀರ್ಘಕಾಲದ ವಿವಾದವನ್ನು ಬಗೆಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಕಳೆದ ಫೆಬ್ರವರಿಯಲ್ಲೇ ನ್ಯಾಯಾಲಯ ಸೂಚಿಸಿತ್ತು. ಇಂದು ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿಯಾ ಅವರು, ನ್ಯಾಯಮಂಡಳಿ ಸ್ಥಾಪನೆಗೆ ಸಂಬಂಧಿಸಿದಂತೆ ಅಂತರ-ಸಚಿವಾಲಯ ಸಮಾಲೋಚನೆಗಳು ಈಗಾಗಲೇ ಪೂರ್ಣಗೊಂಡಿವೆ ಮತ್ತು ಜಲಶಕ್ತಿ ಸಚಿವಾಲಯವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ನ್ಯಾಯಾಲಯಕ್ಕೆ ವಿವರಿಸಿದರು.
ಶಾಸನಬದ್ಧ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಲು ಕಾಲಾವಕಾಶದ ಅಗತ್ಯವಿದೆ ಮತ್ತು ಯಾವುದೇ ಉದ್ದೇಶಪೂರ್ವಕ ವಿಳಂಬ ಮಾಡಲಾಗಿಲ್ಲ ಎಂಬ ಕೇಂದ್ರದ ವಾದವನ್ನು ಪುರಸ್ಕರಿಸಿದ ಪೀಠವು ಆರು ತಿಂಗಳ ಗಡುವನ್ನು ನೀಡಿತು. ಕರಡು ಸಂಪುಟ ಟಿಪ್ಪಣಿಗೆ ಈಗಾಗಲೇ ಜಲಶಕ್ತಿ ಸಚಿವರು ಅನುಮೋದನೆ ನೀಡಿದ್ದು, ಇದು ಸದ್ಯ ಕೇಂದ್ರ ಸಚಿವ ಸಂಪುಟದ ಮುಂದಿದೆ. ಸಂಪುಟದ ಒಪ್ಪಿಗೆ ಸಿಕ್ಕ ನಂತರ, ಅಂತಾರಾಜ್ಯ ನದಿ ನೀರು ವಿವಾದ ಕಾಯ್ದೆ 1956ರ ಅಡಿಯಲ್ಲಿ ನ್ಯಾಯಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಕಳುಹಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕರ್ನಾಟಕ ಸರ್ಕಾರದ ಪರವಾಗಿ ವಕೀಲ ನಿಶಾಂತ್ ಪಾಟೀಲ್ ಅವರು ವಾದ ಮಂಡಿಸಿದ್ದರು. ಈ ತೀರ್ಪಿನಿಂದಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ವಿವಾದ ಇತ್ಯರ್ಥಕ್ಕೆ ಮತ್ತೊಂದು ಮಹತ್ವದ ಹಂತ ತಲುಪಿದಂತಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.