image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಮುಂಗಾರು ಅಧಿವೇಶನಕ್ಕೆ ಕಾಂಗ್ರೆಸ್ ಬ್ರಹ್ಮಾಸ್ತ್ರ: ಮಸೂದೆಗಳ ವಿರುದ್ಧ ವಿಪಕ್ಷಗಳ ಜಂಟಿ ಸಮರ!

ಮುಂಗಾರು ಅಧಿವೇಶನಕ್ಕೆ ಕಾಂಗ್ರೆಸ್ ಬ್ರಹ್ಮಾಸ್ತ್ರ: ಮಸೂದೆಗಳ ವಿರುದ್ಧ ವಿಪಕ್ಷಗಳ ಜಂಟಿ ಸಮರ!

ನವದೆಹಲಿ : ಜುಲೈ 20 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಜಂಟಿ ಹೋರಾಟ ರೂಪಿಸಲು ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನವದೆಹಲಿಯ 10 ಜನ್‌ಪಥ್ ನಿವಾಸದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಮಹತ್ವದ ಸಭೆ ಜರುಗಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡು, ಅಧಿವೇಶನದಲ್ಲಿ ಕೇಂದ್ರವನ್ನು ಕಟ್ಟಿಹಾಕಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಈ ಬಾರಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಪ್ರಮುಖ ಮಸೂದೆಗಳನ್ನು ಸಂಸತ್ತಿನಲ್ಲಿ ಸಾರಾಸಗಟಾಗಿ ವಿರೋಧಿಸಲು ಕಾಂಗ್ರೆಸ್ ನಿರ್ಧರಿಸಿದೆ. ಪ್ರಮುಖವಾಗಿ ಕ್ಷೇತ್ರ ವಿಂಗಡಣೆ ಮಸೂದೆಯನ್ನು ತೀವ್ರವಾಗಿ ವಿರೋಧಿಸುವುದರ ಜೊತೆಗೆ, ವಿವಾದಾತ್ಮಕ 'ಒಂದು ದೇಶ, ಒಂದು ಚುನಾವಣೆ' ಪ್ರಸ್ತಾವನೆಗೆ ಬ್ರೇಕ್ ಹಾಕಲು ನಿರ್ಣಯಿಸಲಾಗಿದೆ. ಇದಲ್ಲದೆ, ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ಜೈಲುವಾಸ ಮತ್ತು ಅಧಿಕಾರಾವಧಿಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ, ವಿಕಸಿತ ಭಾರತ ಶಿಕ್ಷಣ ಅಧಿಷ್ಠಾನ ಮಸೂದೆ, ನ್ಯಾಯಾಧೀಶರ ವಜಾ ಮಸೂದೆ ಹಾಗೂ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಗಳಿಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಲಾಗಿದೆ. 2013 ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಗೆ ಸರ್ಕಾರ ತರಲು ಉದ್ದೇಶಿಸಿರುವ ಮಾರ್ಪಾಡುಗಳನ್ನೂ ವಿರೋಧಿಸಲು ಪಕ್ಷ ನಿರ್ಧರಿಸಿದ್ದು, ಸಮಾನ ಮನಸ್ಕ ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಬಲಿಷ್ಠ ಹೋರಾಟ ಕಟ್ಟಲು ತೀರ್ಮಾನಿಸಿದೆ.

ಶಾಸನಸಭೆಯ ಕಾರ್ಯಕಲಾಪಗಳ ಹೊರತಾಗಿಯೂ, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪ್ರಚಲಿತ ಸಮಸ್ಯೆಗಳ ಅಸ್ತ್ರವನ್ನು ಬಳಸಿ ಸರ್ಕಾರದ ಮೇಲೆ ಒತ್ತಡ ಹೇರಲು ವಿಪಕ್ಷಗಳ ಮೈತ್ರಿಕೂಟ ಮುಂದಾಗಿದೆ. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ, ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳು, ತೈಲ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆ ಹಾಗೂ ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಂತಹ ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಉಭಯ ಸದನಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಮೈತ್ರಿಕೂಟ ಸರ್ವಸನ್ನದ್ಧವಾಗಿದೆ.

Category
ಕರಾವಳಿ ತರಂಗಿಣಿ