ಉತ್ತರ ಪ್ರದೇಶ : ಹಿಂದೂಗಳ ಆರಾಧ್ಯ ದೈವ ಶ್ರೀಕೃಷ್ಣನನ್ನು ಮುಸ್ಲಿಂ ಹಾಗೂ ಆತ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲಾನಾ ಜರ್ಜೀಸ್ ಅನ್ಸಾರಿ ವಿರುದ್ಧ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿದೆ. ಈ ಸಂಬಂಧ ಯುಪಿಯ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಬರೋಬ್ಬರಿ 95ಕ್ಕೂ ಹೆಚ್ಚು ಪೊಲೀಸ್ ದೂರುಗಳು ದಾಖಲಾಗಿವೆ. ಜೂನ್ 23 ರಂದು ಜಾರ್ಖಂಡ್‌ನಲ್ಲಿ ನಡೆದ ಧಾರ್ಮಿಕ ಸಭೆಯೊಂದರಲ್ಲಿ ಉತ್ತರ ಪ್ರದೇಶದ ಇಟಾವಾ ಮೂಲದ ಮೌಲಾನಾ ಜರ್ಜೀಸ್ ಅನ್ಸಾರಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸದ್ಯ ಮಥುರಾದ ಕೃಷ್ಣ ಜನ್ಮಭೂಮಿ ವಿವಾದದ ನಡುವೆಯೇ ಈ ಹಳೆಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ಪ್ರತಿಭಟನೆಗೆ ಕಾರಣವಾಗಿದೆ.
ವಿವಾದಾತ್ಮಕ ಹೇಳಿಕೆ ನೀಡಿರುವ ಮೌಲಾನಾ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಆಗ್ರಹಿಸಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಂಘಟನೆಯ ರಾಷ್ಟ್ರೀಯ ವಕ್ತಾರ ಶಿಶಿರ್ ಚತುರ್ವೇದಿ, ಮೌಲಾನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ, ಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸ್ ಅಧ್ಯಕ್ಷ ದಿನೇಶ್ ಫಲಾಹರಿ ಕೂಡ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದು, ಅನ್ಸಾರಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.
ಈ ವಿವಾದ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ನಾಯಕ ಮೊಹ್ಸಿನ್ ರಾಜಾ ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನಂತಹ ಪಕ್ಷಗಳು ಹಿಂದೂ ದೇವತೆಗಳನ್ನು ಅವಮಾನಿಸಲು ಇಂತಹ ವ್ಯಕ್ತಿಗಳಿಗೆ ವೇದಿಕೆ ಕಲ್ಪಿಸಿಕೊಡುತ್ತಿವೆ ಎಂದು ಆರೋಪಿಸಿರುವ ಅವರು, ಈ ಮೌಲಾನಾಗೆ ಯಾವುದೇ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವಿದೆಯೇ ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಮೌಲಾನಾ ಜರ್ಜೀಸ್ ಅನ್ಸಾರಿಯ ಈ ಬೇಜವಾಬ್ದಾರಿ ಹೇಳಿಕೆಗೆ ಮುಸ್ಲಿಂ ಸಮುದಾಯದ ಒಳಗೂ ತೀವ್ರ ವಿರೋಧ ವ್ಯಕ್ತವಾಗಿದೆ. ಆಲ್ ಇಂಡಿಯಾ ಶಿಯಾ ಪರ್ಸನಲ್ ಲಾ ಬೋರ್ಡ್‌ನ ಪ್ರಧಾನ ಕಾರ್ಯದರ್ಶಿ ಮೌಲಾನಾ ಯಾಸೂಬ್ ಅಬ್ಬಾಸ್ ಈ ಕುರಿತು ಪ್ರತಿಕ್ರಿಯಿಸಿದ್ದು, ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಕೋಟ್ಯಂತರ ಜನರ ಆರಾಧ್ಯ ದೈವ ನಮಾಜ್ ಮಾಡುತ್ತಿದ್ದರು ಎಂದು ಹೇಳುವ ಮೂಲಕ ಇಸ್ಲಾಂ ಧರ್ಮಕ್ಕೆ ಮತ್ತು ನಮಾಜ್‌ಗೆ ಅಪಕೀರ್ತಿ ತರಲಾಗುತ್ತಿದೆ. ಸರ್ಕಾರ ಇಂತಹ ವ್ಯಕ್ತಿಗಳ ಮೇಲೆ ನಿಷೇಧ ಹೇರಬೇಕು ಮತ್ತು ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.