image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಅಡಿಕೆ ರೋಗಕ್ಕೆ ಶಾಶ್ವತ ಪರಿಹಾರಕ್ಕೆ ಸಂಸತ್ತಿನಲ್ಲಿ ಸಂಸದ ಕ್ಯಾ. ಚೌಟ ಒತ್ತಾಯ

ಅಡಿಕೆ ರೋಗಕ್ಕೆ ಶಾಶ್ವತ ಪರಿಹಾರಕ್ಕೆ ಸಂಸತ್ತಿನಲ್ಲಿ ಸಂಸದ ಕ್ಯಾ. ಚೌಟ ಒತ್ತಾಯ

ನವದೆಹಲಿ : ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಕಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ಶಾಶ್ವತ ಮತ್ತು ವೈಜ್ಞಾನಿಕ ಪರಿಹಾರ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದ್ದಾರೆ. ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಂಸದರು, ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ತೋಟಗಳು ಪುನರಾವರ್ತಿತ ರೋಗಗಳಿಂದ ತೀವ್ರ ಹಾನಿಗೊಳಗಾಗುತ್ತಿದ್ದು, ಇವುಗಳ ನಿವಾರಣೆಗೆ ಪೂರ್ಣ ಪ್ರಮಾಣದ ವೈಜ್ಞಾನಿಕ ನಿಯಂತ್ರಣ ಕ್ರಮಗಳ ಅಗತ್ಯವಿದೆ ಎಂದರು. ಪ್ರಸ್ತುತ 'ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್' (MIDH) ಅಡಿಯಲ್ಲಿ ನೀಡಲಾಗುತ್ತಿರುವ ಆರ್ಥಿಕ ನೆರವು ನಿಗದಿತ ಘಟಕ ವೆಚ್ಚಗಳನ್ನು ಆಧರಿಸಿದೆ. ಆದರೆ ಇದು ಪ್ರದೇಶದಿಂದ ಪ್ರದೇಶಕ್ಕೆ ವ್ಯತ್ಯಾಸವಾಗುವ ರೋಗ ಬಾಧೆಯ ತೀವ್ರತೆ ಹಾಗೂ ವೈಜ್ಞಾನಿಕ ಚಿಕಿತ್ಸೆಗೆ ತಗುಲುವ ಸಂಪೂರ್ಣ ವೆಚ್ಚವನ್ನು ಭರಿಸಲು ಸಾಕಾಗುತ್ತಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ ಅವರು, CPCRI ನೇತೃತ್ವದಲ್ಲಿ, DASD ಸಂಸ್ಥೆ, ಬಾಧಿತ ರಾಜ್ಯಗಳ ಸರ್ಕಾರಗಳು ಮತ್ತು ಬೆಳೆಗಾರರ ಸಂಸ್ಥೆಗಳ ಸಹಯೋಗದೊಂದಿಗೆ ಕಾಲಮಿತಿಯಲ್ಲಿ ರೋಗದ ಚಿಕಿತ್ಸೆ ಮತ್ತು ವೆಚ್ಚ ಭರಿಸುವುದಕ್ಕೆ ಪೂರಕವಾಗುವ ವೈಜ್ಞಾನಿಕ ಅಧ್ಯಯನ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಅಲ್ಲದೆ, ಈ ವೈಜ್ಞಾನಿಕ ವರದಿಯ ಆಧಾರದ ಮೇಲೆ MIDH ನಿಯಮಾವಳಿಗಳನ್ನು ತಿದ್ದುಪಡಿ ಮಾಡಿ, ತೋಟಗಾರಿಕಾ ಬೆಳೆಗಳಿಗೆ ಪ್ರತ್ಯೇಕ ರೋಗ-ಆಧಾರಿತ ಘಟಕವನ್ನು (disease-specific component) ರೂಪಿಸಬೇಕು. ಕೇವಲ ಒಂದು ಬಾರಿಯ ಇನ್‌ಪುಟ್ ಸಹಾಯಧನದ ಬದಲಿಗೆ ಹಂತ ಹಂತವಾಗಿ ರೋಗ ನಿಯಂತ್ರಣ ಚಿಕಿತ್ಸೆಗೆ ಅವಕಾಶ ಕಲ್ಪಿಸಬೇಕು ಮತ್ತು ಸಣ್ಣ-ಅತಿ ಸಣ್ಣ ರೈತರಿಗೆ ಇದರಲ್ಲಿ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಈ ಹಿಂದೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೂ ಪತ್ರ ಬರೆದಿದ್ದ ಸಂಸದ ಕ್ಯಾ. ಚೌಟ, ಎಂಐಡಿಹೆಚ್ ವೆಚ್ಚದ ಮಿತಿಯಿಂದ ವಿಶೇಷ ವಿನಾಯಿತಿ ನೀಡಿ ಸಮಗ್ರ ಬೆಂಬಲ ಪ್ಯಾಕೇಜ್ ಘೋಷಿಸುವಂತೆ ಹಾಗೂ ಮಂಗಳೂರಿಗೆ ಭೇಟಿ ನೀಡಿ ರೈತರ ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿ ನೈಜ ಸ್ಥಿತಿಗತಿಯನ್ನು ಪರಿಶೀಲಿಸುವಂತೆ ವಿನಂತಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Category
ಕರಾವಳಿ ತರಂಗಿಣಿ