image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಆರ್ಟಿಕಲ್ 370 ರದ್ದು : ಜಮ್ಮು-ಕಾಶ್ಮೀರದಲ್ಲಿ ಹೊಸ ಅಧ್ಯಾಯಕ್ಕೆ 7 ವರ್ಷ - ಪ್ರಧಾನಿ ಮೋದಿ

ಆರ್ಟಿಕಲ್ 370 ರದ್ದು : ಜಮ್ಮು-ಕಾಶ್ಮೀರದಲ್ಲಿ ಹೊಸ ಅಧ್ಯಾಯಕ್ಕೆ 7 ವರ್ಷ - ಪ್ರಧಾನಿ ಮೋದಿ

ನವದೆಹಲಿ : 2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಆರ್ಟಿಕಲ್ 370 ಮತ್ತು 35(ಎ) ಅನ್ನು ರದ್ದುಗೊಳಿಸಿ, ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಅಂತ್ಯಗೊಳಿಸುವ ಮೂಲಕ ಅದನ್ನು ಸಂಪೂರ್ಣವಾಗಿ ಭಾರತದ ಸಾಂವಿಧಾನಿಕ ಚೌಕಟ್ಟಿನೊಳಗೆ ತಂದಿತ್ತು. ಈ ನಿರ್ಧಾರಕ್ಕೆ ಏಳು ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ 'ಎಕ್ಸ್' (X)ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಈ ಕ್ರಮವನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಪಯಣದಲ್ಲಿ ನಿರ್ಣಾಯಕ ಹೊಸ ಅಧ್ಯಾಯ ಎಂದು ಬಣ್ಣಿಸಿದ್ದಾರೆ.

ಏಳು ವರ್ಷಗಳ ಹಿಂದೆ ಆರ್ಟಿಕಲ್ 370 ಇತಿಹಾಸದ ಪುಟ ಸೇರಿದ ನಂತರ ಅಲ್ಲಿನ ಜನರ ಬದುಕಿನಲ್ಲಿ ವ್ಯಾಪಕ ಬದಲಾವಣೆಗಳಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ. ಈ ಅವಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದ್ದು, ಶಿಕ್ಷಣ, ಆರೋಗ್ಯ, ಉದ್ಯಮಶೀಲತೆ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಿವೆ. ಅಲ್ಲದೆ, ದಶಕಗಳಿಂದ ಮೂಲಭೂತ ಸಾಂವಿಧಾನಿಕ ಹಕ್ಕುಗಳಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳಿಗೆ ಈಗ ಸಂಪೂರ್ಣ ಹಕ್ಕುಗಳು ದೊರೆತಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ವರ್ಷ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ವಾರ್ಷಿಕೋತ್ಸವ ನಡೆಯುತ್ತಿರುವುದರಿಂದ ಈ ಬಾರಿಯ ಆಗಸ್ಟ್ 5ರ ಆಚರಣೆಗೆ ಮತ್ತಷ್ಟು ವಿಶೇಷ ಮಹತ್ವ ಬಂದಿದೆ ಎಂದು ಪ್ರಧಾನಿ ಮೋದಿ ಸ್ಮರಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಸಂವಿಧಾನ ಹಾಗೂ ಧ್ವಜ ನೀಡುವುದನ್ನು ತೀವ್ರವಾಗಿ ವಿರೋಧಿಸಿ, ರಾಷ್ಟ್ರೀಯ ಏಕತೆಗಾಗಿ ಹೋರಾಡಿದ್ದ ಡಾ. ಮುಖರ್ಜಿ ಕಂಡ ಕನಸು 2019ರ ಆಗಸ್ಟ್ 5ರಂದು ಸಾಕಾರಗೊಂಡಿತು ಎಂದಿದ್ದಾರೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರತಿಯೊಬ್ಬ ನಾಗರಿಕನಿಗೂ 'ವಿಕಸಿತ ಭಾರತ' ನಿರ್ಮಾಣದಲ್ಲಿ ಪಾಲ್ಗೊಳ್ಳಲು ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಪುನರುಚ್ಚರಿಸಿದ್ದಾರೆ.

Category
ಕರಾವಳಿ ತರಂಗಿಣಿ