ನವದೆಹಲಿ: ಭಾರತೀಯ ಸೇನಾಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಪ್ರಾರಂಭಿಸಿದ ನಂತರ ಪ್ರಧಾನಿ ಮೋದಿಯವರ ಮೊದಲ ಭಾಷಣ ಇದಾಗಿದೆ. ಪ್ರಧಾನಿ ಮೋದಿ ಏನು ಮಾತನಾಡಲಿದ್ದಾರೆ ಎಂಬುದರ ಬಗ್ಗೆ ಭಾರತ ಮಾತ್ರವಲ್ಲದೇ ಇಡೀ ವಿಶ್ವದ ಗಮನವಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತೀಯ ಸೇನೆ ಪ್ರಾರಂಭಿಸಿದ ಕಾರ್ಯಾಚರಣೆಯಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಇದರ ನಡುವೆ ಮೇ 10ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳೂ ಕದನ ವಿರಾಮಕ್ಕೆ ನಿರ್ಧರಿಸಿದ್ದವು.
ಆಪರೇಷನ್ ಸಿಂಧೂರ್ ಪ್ರಾರಂಭಿಸಿದಾಗಿನಿಂದ ಪ್ರಧಾನಿ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್, ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು, ಸಿಡಿಎಸ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದರು.