ವಯನಾಡ್ : 2018ರಲ್ಲಿ ನಡೆದ ಜಲಸ್ಫೋಟದಂತೆ ಕೇರಳದಲ್ಲೂ (Kerala) ದುರಂತ ಸಂಭವಿಸಿದೆ. ಇಂದು ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದ್ದು, ಈ ದುರಂತದಲ್ಲಿ 24 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದ್ದು, ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ ಎನ್ನಲಾಗಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ. ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡ ವಯನಾಡ್‌ಗೆ ತೆರಳುತ್ತಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವಯನಾಡ್‌ಗೆ ತೆರಳಲು ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ಸೂಚನೆ ನೀಡಲಾಗಿದೆ.
ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಮುಂದಿನ 3 ಗಂಟೆಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ