ನವದೆಹಲಿ: ಶಾಸಕ ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ವಿನಯ್ ಕುಲಕರ್ಣಿ ಅವರ ಪರ ಅರ್ಜಿ ಸಲ್ಲಿಸಿದ ವಕೀಲರು, ವಿನಯ್ ಕುಲಕರ್ಣಿ ಹಾಲಿ ಶಾಸಕರು ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರು. ಜೂನ್ 6ರ ಸುಪ್ರೀಂಕೋರ್ಟ್‌ನ ಆದೇಶ ಪಾಲಿಸಲು ಅವರಿಗೆ ಕನಿಷ್ಠ ಒಂದು ವಾರದ ಹೆಚ್ಚುವರಿ ಸಮಯ ನೀಡುವಂತೆ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಮನಮೋಹನ್ ಅವರನ್ನು ಒಳಗೊಂಡ ಪೀಠಕ್ಕೆ ಕೋರಿದರು.
ಸುಪ್ರೀಂಕೋರ್ಟ್ ಆದೇಶದಂತೆ ವಿನಯ್ ಕುಲಕರ್ಣಿ ಶರಣಾಗಬೇಕು. ನಿಮ್ಮ ಮನವಿ ತಿರಸ್ಕರಿಸಲಾಗಿದೆ. ಜೂನ್ 6ರ ತೀರ್ಪಿನಂತೆ ಒಂದು ವಾರದೊಳಗೆ ಕುಲಕರ್ಣಿ ಶರಣಾಗಬೇಕು ಎಂದು ಹೇಳಿತು. ಜೂನ್ 6 ರಂದು ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಆರೋಪಿಗಳು, ತಮ್ಮ ಮೇಲೆ ವಿಧಿಸಲಾದ ಷರತ್ತುಗಳನ್ನು ಉಲ್ಲಂಘಿಸಿ ಸಾಕ್ಷಿಗಳನ್ನು ಸಂಪರ್ಕಿಸಲು ಮತ್ತು ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್ ಗಮನಿಸಿತ್ತು.
ಸಿಬಿಐ ಸಲ್ಲಿಸಿದ ಮೇಲ್ಮನವಿ ಅಂಗೀಕರಿಸಿದ್ದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಸಂದರ್ಭಗಳ ಸಂಪೂರ್ಣತೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿವಾದಿ ವಿನಯ್ ಕುಲಕರ್ಣಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಬೇಕು ಎಂದು ಈ ನ್ಯಾಯಾಲಯವು ನಿರ್ಧರಿಸಿದೆ. ಆರೋಪಿ ಸಂಖ್ಯೆ 15 ಅಂದರೆ, ಪ್ರತಿವಾದಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ. ಇಂದಿನಿಂದ 1 ವಾರದ ಅವಧಿಯಲ್ಲಿ ಪ್ರತಿವಾದಿಯು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯ / ಜೈಲು ಪ್ರಾಧಿಕಾರದ ಮುಂದೆ ಶರಣಾಗಬೇಕು. ನಮ್ಮ ಯಾವುದೇ ಅವಲೋಕನಗಳಿಂದ ಪ್ರಭಾವಿತರಾಗದೇ, ವಿಚಾರಣೆಯನ್ನು ತ್ವರಿತವಾಗಿ ಮುಗಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿತ್ತು.
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ವಿನಯ್ ಕುಲಕರ್ಣಿ ಅವರಿಗೆ 2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ, ಸಾಕ್ಷಿಗಳಿಗೆ ಆಮಿಷ ಒಡ್ಡಿರುವುದರಿಂದ ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿತ್ತು. ಸಿಬಿಐ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.