ಹರಿಯಾಣ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಅಷ್ಟೇ ಅಲ್ಲ ಇಂದು ಜನಪ್ರತಿನಿಧಿಗಳ ಕೋರ್ಟ್ ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದೆ ಎಂಬ ವಿಚಾರದ ಬಗ್ಗೆ ಪ್ರಧಾನಿ ಮೋದಿ ಮಾತನಾಡಿ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಹರಿಯಾಣ ವಿಧಾನಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಹರಿಯಾಣದ ಸೋನಿಪತ್‌ನಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸಿದರಲ್ಲದೇ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಗಮನ ಸೆಳೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಒಂದೂವರೆ ವರ್ಷಗಳಷ್ಟೇ ಕಳೆದಿದೆ. ಅಷ್ಟರಲ್ಲೇ ಅಲ್ಲಿನ ಮುಖ್ಯಮಂತ್ರಿ ಭೂ ಹಗರಣದ ಆರೋಪ ಎದುರಿಸುತ್ತಿದ್ದಾರೆ. ರಾಜ್ಯಪಾಲರು ನೀಡಿದ್ದ ಪ್ರಾಸಿಕೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಪ್ರಕರಣದಲ್ಲಿ ಸೂಕ್ತ ತನಿಖೆ ಅಗತ್ಯ ಎಂದು ನ್ಯಾಯಾಲಯ ಹೇಳಿದೆ ಎಂದು ಮೋದಿ ದೇಶದ ಜನರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್‌ಗಿಂತ ದೊಡ್ಡ ಭ್ರಷ್ಟ ಪಕ್ಷ ಇನ್ನೊಂದಿಲ್ಲ. ಕಾಂಗ್ರೆಸ್‌ಗೆ ಅವಕಾಶ ಸಿಕ್ಕಿದಲ್ಲೆಲ್ಲಾ, ಕಾಲಿಟ್ಟಲ್ಲೆಲ್ಲಾ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಖಚಿತ ಎಂಬುದು ನಿಮಗೂ ಗೊತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು. ಬಿಜೆಪಿ ಆಡಳಿತ ಅವಧಿಯಲ್ಲಿ ಹರಿಯಾಣದಲ್ಲಿ ಕೃಷಿ ಸುಧಾರಣೆಗಳ ಬಗ್ಗೆ ಬೆಳಕು ಚೆಲ್ಲಿದೆ. ಪಕ್ಷ ರೈತರನ್ನು ಮೇಲಕ್ಕೆತ್ತಲು ಕೆಲಸ ಮಾಡಿದೆ ಎಂದು ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡರು.