image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ: ಹೈ ಅಲರ್ಟ್ ಘೋಷಣೆ

ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ: ಹೈ ಅಲರ್ಟ್ ಘೋಷಣೆ

ಇಂಫಾಲ್: ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಲು ಎಲ್ಲ 16 ಜಿಲ್ಲಾ ಪೊಲೀಸ್ ವರಿಷ್ಠರಿಗೆ ಗೃಹ ಇಲಾಖೆ ಸೂಚಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿ ಬುಧವಾರ ಎರಡು ನಾಗಾ ಗ್ರಾಮಗಳ ನಿವಾಸಿಗಳ ನಡುವೆ ಘರ್ಷಣೆ ನಡೆದಿದೆ. ಎರಡು ಗ್ರಾಮಗಳ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗುಂಡಿನ ಕಾಳಗದಲ್ಲಿ ಮಣಿಪುರ ರೈಫಲ್ಸ್ ಸೈನಿಕ ಸೇರಿದಂತೆ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ವರದಿಯಾದ ಬಳಿಕ ಮಣಿಪುರ ಪೊಲೀಸರು ಎಲ್ಲಾ 16 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗೆ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.

ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ -ಎಡಿಜಿ ಎಲ್. ಕೈಲುನ್ ಹೊರಡಿಸಿರುವ ತುರ್ತು ಸಂದೇಶದಲ್ಲಿ ಎಲ್ಲಾ 16 ಜಿಲ್ಲಾ ಎಸ್‌ಪಿಗಳಿಗೆ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳಿಗೆ ಸರಿಯಾದ ಭದ್ರತೆ ಖಚಿತಪಡಿಸಿಕೊಳ್ಳಬೇಕು. ಎಲ್ಲ ಅಧಿಕಾರಿಗಳು, ಪೊಲೀಸ್ ಠಾಣೆಗಳು, ಔಟ್‌ಪೋಸ್ಟ್‌ಗಳು ಮತ್ತು ನಾಕಾ ಪಾಯಿಂಟ್‌ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಎಡಿಜಿ ತಮ್ಮ ತುರ್ತು ಸಂದೇಶದಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಮೂವರು ನಾಗಾಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಜನರು ಶಾಂತವಾಗಿರುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ಕೂಡಾ ಕೊಟ್ಟಿದ್ದಾರೆ.

ಎಲ್ಲಾ ಗಾಯಾಳುಗಳಿಗೆ ಇಂಫಾಲ್ ಮತ್ತು ಉಖ್ರುಲ್‌ನಲ್ಲಿ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಲು ಸರ್ಕಾರದಿಂದ ಸಹಾಯ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬುಧವಾರ ರಾತ್ರಿ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೇಟಿ ಸಮುದಾಯಕ್ಕೆ ಸೇರಿದ ಇಬ್ಬರು ಯುವಕರ ಅಪಹರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 27 ರಿಂದ ಕಣಿವೆಯ ಆರು ಜಿಲ್ಲೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಈ ಜಿಲ್ಲೆಗಳಲ್ಲಿ ಪೊಲೀಸರು ಈಗಲೂ ಸಹ ಕಟ್ಟೆಚ್ಚರ ವಹಿಸಿದ್ದಾರೆ.

Category
ಕರಾವಳಿ ತರಂಗಿಣಿ