ಬೆಂಗಳೂರು: ಚನ್ನಪಟ್ಟಣದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಯೋಗೇಶ್ವರ್ ಅವರು ಬಿಜೆಪಿಯಿಂದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸಿ ಪಿ ಯೋಗೇಶ್ವರ್ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿ ಪಿ ಯೋಗೇಶ್ವರ್ ಚನ್ನಪಟ್ಟಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಬೆಳವಣಿಗೆಗೆ ಕಾದು ನೋಡಬೇಕಾಗಿದೆ.