image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ ಹಾಗೂ 32,611 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ

ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ ಹಾಗೂ 32,611 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ

ಮಂಗಳೂರು:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ  ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ತುಳು ಭಾಷೆಯನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಿಸಲಾಗಿದೆ. ಜೊತೆಗೆ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026 ಹಾಗೂ 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ ಒಟ್ಟು 32,611 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಅಧಿಕೃತ ಅನುಮೋದನೆ ನೀಡಲಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಒಟ್ಟು ಅನುಮೋದಿತ ಮೊತ್ತದಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಗಳಾಗಿದ್ದು, ಉಳಿದ ಹಣವು ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ತಿಳಿಸಿದರು. ಜನರ ಭಾವನೆಗಳು ಹಾಗೂ ಬದುಕಿಗೆ ಸ್ಪಂದಿಸುವ ನಿಟ್ಟಿನಲ್ಲಿ ತಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯನ್ನಾಗಿ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮರುನಾಮಕರಣ: ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು' ಎಂದು ಮರುನಾಮಕರಣ ಮಾಡುವ ಕುರಿತು ಕರಡು ಅಧಿಸೂಚನೆ ಹೊರಡಿಸಿ, ಒಂದು ತಿಂಗಳ ಕಾಲ ಸಾರ್ವಜನಿಕರ ಜನಾಭಿಪ್ರಾಯ ಸಂಗ್ರಹಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ:

ಕರಾವಳಿ ಮತ್ತು ಮಲೆನಾಡು ಪ್ರದೇಶಕ್ಕೆ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲಾಗಿದ್ದು, ಹೂಡಿಕೆದಾರರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲಾಗಿದೆ.

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ:

ಮೀನುಗಾರಿಕೆಗೆ ಒತ್ತು ನೀಡಲು 'ಫಿಶರೀಸ್ ಅಂಡ್ ಬ್ಲೂ ಎಕಾನಮಿ ಯೂನಿವರ್ಸಿಟಿ' ಸ್ಥಾಪನೆ ಹಾಗೂ ಮೀನುಗಾರಿಕಾ ಕಾಲೇಜು ಸೀಟುಗಳನ್ನು 60 ರಿಂದ 200ಕ್ಕೆ ಹೆಚ್ಚಳ. ಇದರೊಂದಿಗೆ ಪುತ್ತೂರಿನಲ್ಲಿ 549 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಪ್ಪಿಗೆ.

ಮುಂದಿನ ಸಂಪುಟ ಸಭೆಗಳು:

ಬೆಂಗಳೂರಿನ ಹೊರತಾಗಿ ಮುಂದಿನ 15 ತಿಂಗಳಲ್ಲಿ ರಾಜ್ಯದ ವಿವಿಧೆಡೆ 10 ರಿಂದ 12 ಕಡೆಗಳಲ್ಲಿ ಸಚಿವ ಸಂಪುಟ ಸಭೆಗಳನ್ನು ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಗುರಿ ಹೊಂದಲಾಗಿದೆ.
ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ವಿವಿಧ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.

Category
ಕರಾವಳಿ ತರಂಗಿಣಿ