image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳು ‘ಭಾರತ್ ಮಾತಾ ಕೀ ಜೈ’ ಎನ್ನುವುದು ಕಾಂಗ್ರೆಸ್ ಆಡಳಿತದಲ್ಲಿ ಮಹಾಪರಾಧವೇ – ಶಾಸಕ ವೇದವ್ಯಾಸ ಕಾಮತ್

ವಿದ್ಯಾರ್ಥಿಗಳು ‘ಭಾರತ್ ಮಾತಾ ಕೀ ಜೈ’ ಎನ್ನುವುದು ಕಾಂಗ್ರೆಸ್ ಆಡಳಿತದಲ್ಲಿ ಮಹಾಪರಾಧವೇ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಮಂಗಳೂರು ದಸರಾ ಸಂಭ್ರಮದ ಅವಧಿಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸಿದ ಕಾಲೇಜಿನ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ವರ್ತಿಸಿದ ರೀತಿಯನ್ನು ಖಂಡಿಸಿರುವ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ತಪ್ಪಿತಸ್ಥ ಪೊಲೀಸರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಹಬ್ಬದ ಮರುದಿನ ಪರೀಕ್ಷೆ ನಡೆಸುವುದನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಕಾಲೇಜಿಗೆ ಮನವಿ ಮಾಡಿದ್ದರೂ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಪೋಷಕರು ವಿಷಯವನ್ನು ಗಮನಕ್ಕೆ ತಂದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೆ. ಎಲ್ಲವೂ ಸುಸೂತ್ರವಾಗಿ ಬಗೆಹರಿಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನಡೆದುಕೊಂಡ ರೀತಿ ಖಂಡನೀಯ ಎಂದು ಹೇಳಿದರು.

ಡಿಸೆಂಬರ್ 25ರಂದು ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ 140ಕ್ಕೂ ಹೆಚ್ಚು ಕಾಲೇಜುಗಳ ಡಿಸೆಂಬರ್ 26ರ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಅದೇ ಮಾದರಿಯಲ್ಲಿ ದಸರಾ ಹಬ್ಬದ ಮರುದಿನದ ಪರೀಕ್ಷೆಯನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಕುಟುಂಬದೊಂದಿಗೆ ಹಬ್ಬ ಆಚರಿಸಲು ಬಯಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ತೊಂದರೆಯಾಗಿತ್ತು. ಇದರಲ್ಲಿ ರಾಜಕೀಯ ಮಾಡುವ ಉದ್ದೇಶವಿಲ್ಲದೆ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗೆ ಸ್ಪಂದಿಸುವಂತೆ ಪ್ರಯತ್ನಿಸಿದ್ದೆ ಎಂದು ತಿಳಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ಕುತ್ತಿಗೆಯ ಪಟ್ಟಿ ಹಿಡಿದು ಎಳೆದೊಯ್ದಿರುವುದು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪಗಳು ಗಂಭೀರವಾಗಿವೆ. ವಿಶೇಷವಾಗಿ ಪ್ರತಿಭಟನೆಯಲ್ಲಿ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿರುವುದನ್ನು ಒಪ್ಪಲು ಸಾಧ್ಯವಿಲ್ಲ. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಪ್ರಕರಣದ ಕುರಿತು ಉಲ್ಲೇಖಿಸಿದ ಅವರು, ಭಾರತ್ ಮಾತಾ ಕೀ ಜೈ ಎನ್ನುವುದು ಮಹಾಪರಾಧವೇ ಎಂದು ಪ್ರಶ್ನಿಸಿದರು.

ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ನಿಯಂತ್ರಿಸಲು ಮಹಿಳಾ ಪೊಲೀಸರ ಬದಲು ಪುರುಷ ಪೊಲೀಸರನ್ನು ಬಳಸಿಕೊಂಡಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿಲ್ಲ ಅಥವಾ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿಲ್ಲ ಎಂದು ಹೇಳಿದ ಅವರು, ಅಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಲು ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದರು.

ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ಕರೆದೊಯ್ದಿರುವ ವಿಷಯ ತಿಳಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ, ವಿದ್ಯಾರ್ಥಿಗಳಿಗೆ ತಮ್ಮ ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಅವರನ್ನು ಬಿಡುಗಡೆಗೊಳಿಸಲು ಪ್ರಯತ್ನಿಸಿದ್ದಾಗಿ ಹೇಳಿದರು. ನಂತರವೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಯು.ಟಿ. ಖಾದರ್ ಮತ್ತು ಐವನ್ ಡಿಸೋಜ ಅವರ ಪಾತ್ರದ ಬಗ್ಗೆ ಕೆಲವರು ಆರೋಪಿಸುತ್ತಿದ್ದಾರೆ ಎಂದು ತಿಳಿಸಿದರು. ಪೊಲೀಸರು ಯಾವುದೇ ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸಬಾರದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಎಬಿವಿಪಿ ನಡೆಸುವ ವಿದ್ಯಾರ್ಥಿ ಹೋರಾಟಗಳಿಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ನಾಗರಪಂಚಮಿ, ಅಷ್ಟಮಿ, ದಸರಾ ಸೇರಿದಂತೆ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಬೆಂಬಲ ನೀಡುವ ಎಬಿವಿಪಿಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯಿಲ್ಲ ಎಂದು ಹೇಳಿದರು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ತಪ್ಪಿತಸ್ಥ ಪೊಲೀಸರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಮತ್ತು ಲಲೇಶ್ ಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮನೋಹರ್ ಕದ್ರಿ, ನಿಶಾಂತ್ ಪೂಜಾರಿ, ವರುಣ್ ರಾಜ್ ಅಂಬಟ್, ಋತ್ವಿಕ್ ಕದ್ರಿ, ರಾಜೇಂದ್ರ ಶೆಟ್ಟಿ ಹಾಗೂ ಭಾಸ್ಕರ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ