ಬೆಂಗಳೂರು;
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪ್ರಸ್ತುತ ಉದ್ವಿಗ್ನ ಪರಿಸ್ಥಿತಿ ಹಾಗೂ ವಿಮಾನ ಸೇವೆಗಳ ಸ್ಥಗಿತದಿಂದಾಗಿ ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಉಮ್ರಾ ಯಾತ್ರಾರ್ಥಿಗಳ ಸುರಕ್ಷಿತ ಮರಳುವಿಕೆಗೆ ರಾಜ್ಯ ಸರ್ಕಾರ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ತಿಳಿಸಿದ್ದಾರೆ.
ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡು, ರಾಜ್ಯ ಹಜ್ ಕಮಿಟಿಯ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸದಸ್ಯರನ್ನೊಳಗೊಂಡ ವಿಶೇಷ ತಂಡವನ್ನು ತಕ್ಷಣವೇ ಮಕ್ಕಾ ಮತ್ತು ಮದೀನಾಕ್ಕೆ ಕಳುಹಿಸಿಕೊಡಲಾಗಿದೆ. ಈ ತಂಡವು ಅಲ್ಲಿನ ಯಾತ್ರಾರ್ಥಿಗಳನ್ನು ನೇರವಾಗಿ ಭೇಟಿ ಮಾಡಿ ಪರಿಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿದೆ. ಅಲ್ಲದೆ, ಸ್ಥಳೀಯವಾಗಿರುವ ಭಾರತೀಯ ಸಮುದಾಯದ ಸ್ವಯಂಸೇವಾ ಸಂಸ್ಥೆಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಯಾತ್ರಾರ್ಥಿಗಳಿಗೆ ಉಚಿತ ಊಟ, ಅಗತ್ಯ ಔಷಧಿ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಆಕಾಶ ಏರ್, ಇಂಡಿಗೋ, ಫ್ಲೈನಾಸ್ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ಮುಂತಾದ ವಿಮಾನಯಾನ ಸಂಸ್ಥೆಗಳು ಜೆದ್ದಾ ಹಾಗೂ ರಿಯಾದ್ನಿಂದ ಬೆಂಗಳೂರು ಸೇರಿದಂತೆ ದೇಶದ ಇತ್ತೀಚಿನ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ರಾಜ್ಯದ 600ಕ್ಕೂ ಅಧಿಕ ಯಾತ್ರಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಮೂಲಕ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಆದಷ್ಟು ಬೇಗ ವಿಮಾನ ಸಂಚಾರವನ್ನು ಪುನರಾರಂಭಿಸುವಂತೆ ಬಲವಾದ ಒತ್ತಡ ಹೇರಲಾಗಿದೆ.
ಯಾತ್ರಾರ್ಥಿಗಳನ್ನು ಮುಂಗಡ ಟಿಕೆಟ್ ಪಡೆದು ವಿದೇಶಕ್ಕೆ ಕರೆದೊಯ್ದ ಮೇಲೆ ಅವರನ್ನು ಸುರಕ್ಷಿತವಾಗಿ ವಾಪಸ್ ತರುವುದು ಆಯಾ ಏರ್ಲೈನ್ಸ್ಗಳ ಪ್ರಮುಖ ಜವಾಬ್ದಾರಿಯಾಗಿದೆ. ಈ ಕರ್ತವ್ಯವನ್ನು ನೆನಪಿಸಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. ಒಂದು ವೇಳೆ ಈ ಜವಾಬ್ದಾರಿಯನ್ನು ಮರೆತು ನಿರ್ಲಕ್ಷ್ಯ ತೋರಿದರೆ, ಅಂತಹ ಏರ್ಲೈನ್ಸ್ಗಳ ವಿರುದ್ಧ ಕರ್ನಾಟಕ ರಾಜ್ಯ ಹಜ್ ಕಮಿಟಿ ವತಿಯಿಂದ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವ ಕುರಿತು ಕಾನೂನು ತಜ್ಞರೊಂದಿಗೆ ಗಂಭೀರ ಸಮಾಲೋಚನೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯು.ಟಿ. ಖಾದರ್ ಎಚ್ಚರಿಸಿದ್ದಾರೆ.
ಯಾತ್ರಾರ್ಥಿಗಳು ಹಾಗೂ ಅವರ ಕುಟುಂಬ ವರ್ಗದವರು ಯಾವುದೇ ಆತಂಕ ಪಡಬೇಕಿಲ್ಲ. ರಾಜ್ಯ ಸರ್ಕಾರವು ಯಾತ್ರಾರ್ಥಿಗಳು ಮತ್ತು ಅವರ ಕುಟುಂಬದವರ ಬೆನ್ನೆಲುಬಾಗಿ ನಿಲ್ಲಲಿದೆ. ಯಾತ್ರಾರ್ಥಿಗಳ ಸುರಕ್ಷತೆ ಮತ್ತು ಕ್ಷೇಮವೇ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಸಂಕಷ್ಟದಲ್ಲಿರುವ ಯಾತ್ರಾರ್ಥಿಗಳು ಹಾಗೂ ಅವರ ಕುಟುಂಬದವರು ಹೆಚ್ಚಿನ ಮಾಹಿತಿ ಮತ್ತು ತುರ್ತು ನೆರವಿಗಾಗಿ ಕರ್ನಾಟಕ ರಾಜ್ಯ ಹಜ್ ಕಮಿಟಿಯ 94835 03132 ಅಥವಾ 78997 07775 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.