ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ರೈಲ್ವೆ ಸಂಪರ್ಕ ಜಾಲಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವ ಅಶ್ವಿನಿ ವೈಷ್ಣವ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇಂದು ರಾತ್ರಿ ಮಂಗಳೂರಿಗೆ ಬಂದಿಳಿಯಲಿರುವ ಸಚಿವರು, ನಾಳೆ (ನವೆಂಬರ್ 13, ಶುಕ್ರವಾರ) ಜಿಲ್ಲೆಯ ವಿವಿಧೆಡೆ ಸಂಚರಿಸಿ ಹಲವು ಮಹತ್ವದ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಕೇಂದ್ರ ಸಚಿವರಾದ ಬಳಿಕ ಈ ಅವಧಿಯಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿರುವ ಅಶ್ವಿನಿ ವೈಷ್ಣವ್ ಅವರ ಈ ಪ್ರವಾಸವು, ಜಿಲ್ಲೆಯ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ಬಹುದಿನಗಳ ಬೇಡಿಕೆಗಳ ಈಡೇರಿಕೆಗೆ ಹೊಸ ಭಾಷ್ಯ ಬರೆಯುವ ನಿರೀಕ್ಷೆ ಮೂಡಿಸಿದೆ. ನಾಳೆಯ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ನಾಳೆ ಲೋಕಾರ್ಪಣೆಗೊಳ್ಳಲಿರುವ ಪ್ರಮುಖ ಯೋಜನೆಗಳಲ್ಲಿ ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ಹೈಸ್ಪೀಡ್ ರೈಲು ಸೇವೆ ಪ್ರಮುಖವಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವೀಡಿಯೋ ಕಾನ್ಫರೆನ್ಸ್ ಸಮ್ಮುಖದಲ್ಲಿ ಸಚಿವರು ಈ ನೂತನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ರೈಲು ಸೇವೆಯಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಗಣನೀಯವಾಗಿ ಕಡಿಮೆಯಾಗಲಿದ್ದು, ವಾಣಿಜ್ಯ, ಔದ್ಯೋಗಿಕ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ.
ಇದರೊಂದಿಗೆ ಪಶ್ಚಿಮ ಘಟ್ಟದ ಅತ್ಯಂತ ಸವಾಲಿನ ಮಾರ್ಗವೆನಿಸಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ರೈಲ್ವೆ ಹಳಿ ವಿದ್ಯುದ್ದೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ನಾಳೆ ಲೋಕಾರ್ಪಣೆಗೊಳ್ಳಲಿದೆ. ಇದರಿಂದ ಘಾಟ್ ಸೆಕ್ಷನ್ನಲ್ಲಿ ರೈಲುಗಳ ಸಂಚಾರ ವೇಗ ಮತ್ತು ಸಾಮರ್ಥ್ಯ ಹೆಚ್ಚಾಗಲಿದೆ. ಅಲ್ಲದೆ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಅಮೃತ್ ಭಾರತ್ ನಿಲ್ದಾಣ' ಯೋಜನೆಯಡಿ ಆಧುನಿಕ ಸೌಲಭ್ಯಗಳೊಂದಿಗೆ ನವೀಕರಣಗೊಂಡಿರುವ ಸುಬ್ರಹ್ಮಣ್ಯ ರಸ್ತೆ ರೈಲ್ವೆ ನಿಲ್ದಾಣವನ್ನೂ ಸಚಿವರು ಸಾರ್ವಜನಿಕ ಸೇವೆಗೆ ಸಮರ್ಪಿಸಲಿದ್ದಾರೆ.
ಸಚಿವರ ನಾಳೆಯ ಪ್ರವಾಸದ ವೇಳಾಪಟ್ಟಿಯಂತೆ, ಬೆಳಗ್ಗೆ 8:00 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಬೆಳಗ್ಗೆ 10:30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಬೆಳಗ್ಗೆ 11:30 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 12:00 ಗಂಟೆಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಮಧ್ಯಾಹ್ನ 1:30 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ನೂತನ ವಂದೇ ಭಾರತ್ ರೈಲಿನಲ್ಲೇ ಸುಬ್ರಹ್ಮಣ್ಯದತ್ತ ಪ್ರಯಾಣ ಬೆಳೆಸಲಿರುವ ಸಚಿವರು, ಮಾರ್ಗಮಧ್ಯೆ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಕಬಕ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯರು, ಪ್ರಯಾಣಿಕರು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ. ತದನಂತರ ಸುಬ್ರಹ್ಮಣ್ಯ ರಸ್ತೆ ನಿಲ್ದಾಣಕ್ಕೆ ತೆರಳಿ ನವೀಕೃತ 'ಅಮೃತ್ ಭಾರತ್' ನಿಲ್ದಾಣದ ಕಟ್ಟಡ ಹಾಗೂ ಪ್ರಯಾಣಿಕರ ಸೌಲಭ್ಯಗಳನ್ನು ಖುದ್ದು ವೀಕ್ಷಿಸಲಿದ್ದಾರೆ. ಅಲ್ಲಿಂದ ಮಂಗಳೂರಿಗೆ ವಾಪಸಾಗಿ ಸಂಜೆ 4:00 ಗಂಟೆಗೆ ಐತಿಹಾಸಿಕ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ನವದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಚೇರಿ ಪ್ರಕಟಣೆ ತಿಳಿಸಿದೆ.