ಮಂಗಳೂರು: ನಗರದ ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಹಲವು ವ್ಯಕ್ತಿಗಳು ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದಿರುವ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತೀವ್ರ ಆಘಾತ ಹಾಗೂ ಕಳವಳ ವ್ಯಕ್ತಪಡಿಸಿದ್ದಾರೆ.
ನಗರದ ಕಾಲೇಜು ಆವರಣದಲ್ಲಿ ಸಾರ್ವಜನಿಕರ ಎದುರೇ ಯುವತಿಯೊಬ್ಬಳನ್ನು ಬಲವಂತವಾಗಿ ಕಾರಿಗೆ ಹತ್ತಿಸಿ ಅಪಹರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಈ ಕೃತ್ಯವನ್ನು ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೇ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್ ಅವರು, "ಹಾಡಹಗಲೇ ಕಾಲೇಜು ಆವರಣದಿಂದ ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ದಿರುವುದು ಅತ್ಯಂತ ಆಘಾತಕಾರಿ ಸಂಗತಿಯಾಗಿದೆ. ಇದು ಮಂಗಳೂರು ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ" ಎಂದು ಹೇಳಿದ್ದಾರೆ. ಆರೋಪಿಗಳು ಸಾರ್ವಜನಿಕವಾಗಿ ಯುವತಿಯ ಮೇಲೆ ಮೃಗೀಯ ವರ್ತನೆ ತೋರಿದ್ದು, ಅವರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
"ಕೃತ್ಯ ಎಸಗಿದವರು ಪೋಷಕರೇ ಆಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ವಯಸ್ಕ ಹೆಣ್ಣುಮಕ್ಕಳ ಮೇಲೆ ಇಂತಹ ದಬ್ಬಾಳಿಕೆ ಮತ್ತು ದೌರ್ಜನ್ಯ ನಡೆಸುವುದನ್ನು ದೇಶದ ಸರ್ವೋಚ್ಚ ನ್ಯಾಯಾಲಯ (ಸುಪ್ರೀಂ ಕೋರ್ಟ್) ಸಹ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ" ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಮತ್, "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಣ್ಣುಮಕ್ಕಳಿಗೆ ರಕ್ಷಣೆಯಿಲ್ಲದಂತಹ ವಾತಾವರಣ ನಿರ್ಮಾಣವಾಗಿದೆ. ಇಂತಹ ಘಟನೆಗಳು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುತ್ತಿವೆ" ಎಂದು ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತಕ್ಷಣದ ಕ್ರಮಕ್ಕೆ ಒತ್ತಾಯಿಸಿರುವ ಶಾಸಕರು, ರಾಜ್ಯ ಮಹಿಳಾ ಆಯೋಗವು ತಕ್ಷಣವೇ ಮಧ್ಯಪ್ರವೇಶಿಸಿ ಸಂತ್ರಸ್ತ ಯುವತಿಯ ನೆರವಿಗೆ ಧಾವಿಸಬೇಕು. ಪೊಲೀಸ್ ಇಲಾಖೆಯು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಮತ್ತು ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ ತಕ್ಷಣವೇ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಯುವತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.