ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಬಿ ಜೆ ಪಿಯವರ ಭ್ರಷ್ಟಾಚಾರಕ್ಕೆ ರಾಶಿ ರಾಶಿ ದಾಖಲೆಗಳಿದೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾಡಿರುವುದು ಅವರ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು. ಅವರು ಪ್ರಧಾನ ಮಂತ್ರಿ ಸ್ಥಾನ ನೀಡಲು ಸಿದ್ಧರಿದ್ದಾರೆಯೇ ? ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.
ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ, ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ ಎಂದರು.