ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಕುರಿತು ಅಶ್ಲೀಲ ಪದ ಬಳಕೆ ಸಂಬಂಧ ದಾಖಲಾಗಿದ್ದ ಎಫ್‌ಐಆರ್ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಿಡುಗಡೆಗೆ ಆದೇಶಿಸಿದೆ. ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಅವರು ತಮ್ಮ ಬಂಧನದ ನಂತರ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಹೀಗಾಗಿ ಸಿ.ಟಿ ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಕರೆತರಲಾಗುತ್ತಿದೆ.
ಇದಕ್ಕೂ ಮುನ್ನವೇ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಈ ಮೂಲಕ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಬಿಗ್ ರಿಲೀಫ್ ನೀಡಿದೆ.