ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.
ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ , ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.