image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ

ಭಾರತ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ

ನವದೆಹಲಿ: ಭಾರತ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಸೋಮವಾರ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ. ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗಕ್ಕೆ ಸದಸ್ಯರ ನೇಮಕಾತಿಗೆ ಸಂಬಂಧಿಸಿದಂತೆ ರೂಪಿಸಲಾದ ಹೊಸ ಕಾನೂನಿನಡಿ ಮುಖ್ಯ ಚುನಾವಣಾ ಆಯುಕ್ತರಾಗಿ(ಸಿಇಸಿ) ಆಯ್ಕೆಯಾದ ಮೊದಲಿಗರು.

ಜ್ಞಾನೇಶ್ ಕುಮಾರ್ 26ನೇ ಸಿಇಸಿಯಾಗಿ ತಮ್ಮ ಅಧಿಕಾರವಧಿಯಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಮತ್ತು 2026ರಲ್ಲಿ ನಡೆಯಲಿರುವ ಕೇರಳ, ಪುದುಚೇರಿ ವಿಧಾನಸಭೆ ಚುನಾವಣೆಗಳ ಮೇಲ್ವಿಚಾರಣೆ ನಡೆಸಲಿದ್ದಾರೆ. ಅದೇ ರೀತಿ, 2026ರಲ್ಲಿ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೂ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರ ಮೇಲ್ವಿಚಾರಣೆಯನ್ನೂ ಮಾಡಲಿದ್ದಾರೆ.

ಈ ಹಿಂದೆ, ಗೃಹ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸಿದ್ದ ಜ್ಞಾನೇಶ್ ಕುಮಾರ್, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸಾಂವಿಧಾನಿಕ ಸ್ಥಾನಮಾನ 370ನೇ ವಿಧಿ ರದ್ದಾದ ನಂತರದ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಗುರುತರ ಪಾತ್ರ ನಿರ್ವಹಿಸಿದ್ದರು. ಮಾರ್ಚ್‌ 15, 2024ರಲ್ಲಿ ಇವರು ಕೇಂದ್ರ ಚುನಾವಣಾ ಆಯೋಗದಲ್ಲಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.

ಕೇಂದ್ರ ಚುನಾವಣಾ ಆಯೋಗದ ಸಂಯೋಜನೆಯನ್ನು ಪ್ರಶ್ನಿಸಿ ಸುಪ್ರಿಂ ಕೋರ್ಟ್‌ಗೆ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ಮುಗಿಯುವರೆಗೂ ಚುನಾವಣಾ ಆಯೋಗಕ್ಕೆ ನೂತನ ಮುಖ್ಯಸ್ಥರ ನೇಮಕಾತಿ ಮುಂದೂಡುವಂತೆ ಕಾಂಗ್ರೆಸ್‌, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಕೆಲವೇ ಗಂಟೆಗಳ ನಂತರ ಆಯೋಗಕ್ಕೆ ನೂತನ ಮುಖ್ಯಸ್ಥರನ್ನು ನೇಮಿಸಲಾಗಿದೆ. ಕಾಂಗ್ರೆಸ್‌ ತನ್ನ ಬೇಡಿಕೆಯನ್ನು ನೇಮಕಾತಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಿಟ್ಟಿದ್ದರು ಎಂದು  ಮೂಲಗಳು ತಿಳಿಸಿವೆ.

Category
ಕರಾವಳಿ ತರಂಗಿಣಿ