ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಹಿನ್ನೆಲೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್ಸಾದರು. ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಅಲ್ಲಿಯೇ ಅಧಿಕಾರಿಗಳ ಜೊತೆ ಭದ್ರತೆ ಕುರಿತ ಸಭೆ ನಡೆಸಿದರು.
ಉಗ್ರ ದಾಳಿ ಮತ್ತು ಅದರ ವಿರುದ್ಧದ ಮುಂದಿನ ನಡೆಯ ಕುರಿತು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ದಾಳಿ ಮತ್ತು ಅದರ ವಿರುದ್ಧ ದೇಶಾದ್ಯಂತ ವ್ಯಕ್ತವಾಗುತ್ತಿರುವ ಆಘಾತ ಮತ್ತು ಆಕ್ರೋಶದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಸಂಜೆಯೇ ಶ್ರೀನಗರಕ್ಕೆ ತೆರಳಿದ್ದಾರೆ. ಅಲ್ಲಿನ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿ ಭದ್ರತಾ ಕ್ರಮಗಳ ಮೇಲೆ ಕಣ್ಣಿಟ್ಟಿದ್ದರೆ. ದಾಳಿ ನಡೆಸಿದ ಭಯೋತ್ಪಾದಕರ ಹೆಡೆಮುರಿ ಕಟ್ಟಿ ನ್ಯಾಯದ ಕಟಕಟೆ ಮುಂದೆ ನಿಲ್ಲಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿರುವ ಪ್ರಮುಖ ಪ್ರವಾಸಿ ತಾಣದಲ್ಲಿ ಮಂಗಳವಾರ ಭಯೋತ್ಪಾದಕರು ದಾಳಿ ನಡೆಸಿ ಕನಿಷ್ಠ ಇಬ್ಬರು ಕನ್ನಡಿಗರು ಸೇರಿದಂತೆ 26 ಜನರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇದರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಯುಎಇ ಮತ್ತು ನೇಪಾಳದ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರೂ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.