image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸುರತ್ಕಲ್‌-ಬಿ.ಸಿ.ರೋಡ್‌ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ನಾಳೆ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇತೃತ್ವದಲ್ಲಿ ಚಾಲನೆ

ಸುರತ್ಕಲ್‌-ಬಿ.ಸಿ.ರೋಡ್‌ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ನಾಳೆ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇತೃತ್ವದಲ್ಲಿ ಚಾಲನೆ

ಮಂಗಳೂರು: ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್‌-ಬಿ.ಸಿ. ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ನಾಳೆ(ಏ. 24) ಸಂಜೆ 3.30ಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಚಾಲನೆ ದೊರೆಯಲಿದೆ. 

ಸುರತ್ಕಲ್ ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಜತೆಗೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ. ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್ ಹಾಗೂ ನವ ಮಂಗಳೂರು ಬಂದರು ರಸ್ತೆ ಕಂಪೆನಿ ಲಿಮಿಟೆಡ್‌(ಎನ್‌ಎಂಪಿಆರ್‌ಸಿಎಲ್‌)ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಅದರಲ್ಲೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದು ಹೋಗುವ ಸುರತ್ಕಲ್‌-ನಂತೂರು, ಬಿಸಿ.ರೋಡ್‌-ಪಡೀಲ್‌ ಹಾಗೂ ನಂತೂರು ಜಂಕ್ಷನ್‌ನಿಂದ ಪಡೀಲ್‌ವರೆಗಿನ ಬೈಪಾಸ್‌ ರಸ್ತೆ ಸೇರಿದಂತೆ ಒಟ್ಟು 37.42 ಕಿಮೀ. ದೂರದ ಹೆದ್ದಾರಿಗಳ ರಿಪೇರಿ, ಮರುಡಾಂಬರೀಕರಣ ಹಾಗೂ ನಿರ್ವಹಣೆ ಕೆಲಸಗಳಿಗಾಗಿ ನವ ಮಂಗಳೂರು ಬಂದರು ರಸ್ತೆ ಕಂಪೆನಿ ಲಿಮಿಟೆಡ್‌(ಎನ್‌ಎಂಪಿಆರ್‌ಸಿಎಲ್‌) ಒಟ್ಟು 28.58 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳು ನಡೆಯಲಿವೆ. ಮುಗ್ರೋಡಿ ಕನ್ಸ್‌ಸ್ಟ್ರಕ್ಷನ್‌ ಈ ಎಲ್ಲ ಹೆದ್ದಾರಿ ಕಾಮಗಾರಿಗಳ ಗುತ್ತಿಗೆಯನ್ನು ಪಡೆದುಕೊಂಡಿದೆ.

ಒಟ್ಟು 28.58 ಕೋಟಿ ರೂ. ವೆಚ್ಚದಲ್ಲಿ ಸುರತ್ಕಲ್‌ನಿಂದ ಎಪಿಎಂಸಿ, ಕೂಳೂರಿನಿಂದ ಎಜೆ ಆಸ್ಪತ್ರೆ ಹಾಗೂ ನಂತೂರಿನಿಂದ ಪಡೀಲ್‌ವರೆಗಿನ 11.084 ಕಿಮೀ. ಉದ್ದದ ರಸ್ತೆಯ ಡಾಂಬರೀಕರಣ ನಡೆಯಲಿದೆ. ಅಲ್ಲದೆ, ಹೆದ್ದಾರಿ ಬದಿ ಬೆಳೆದಿರುವ ಗಿಡ-ಗಂಟಿ ತೆಗೆಯುವ ಹಾಗೂ ಸ್ವಚ್ಛತಾ ಕಾರ್ಯ ನಡೆಯಲಿದೆ. ಜತೆಗೆ ರಸ್ತೆ ಬದಿ ಜಾಗದ ನಿರ್ವಹಣೆ, ಇತರ ನಿರ್ವಹಣಾ ಕಾಮಗಾರಿ ಹಾಗೂ ಹೆದ್ದಾರಿಯ ಸುರಕ್ಷತಾ ಕ್ರಮಗಳ ಅಳವಡಿಕೆ ಕಾರ್ಯ ಕೂಡ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ