ನವದೆಹಲಿ: ಒಟಿಟಿ ಪ್ಲಾಟ್ಫಾರ್ಮ್ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ 'ಅಶ್ಲೀಲತೆ' ಹೆಚ್ಚಿದ್ದು, ಅದನ್ನು ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಂಡಿತು. ಈ ಕುರಿತು ಕೇಂದ್ರ ಸರ್ಕಾರ ಸೇರಿದಂತೆ ಹಲವಾರು ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನೋಟಿಸ್ ಜಾರಿ ಮಾಡಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಳಿದೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರಿದ್ದ ಪೀಠದ ಮುಂದೆ ಈ ಅರ್ಜಿಗಳ ವಿಚಾರಣೆ ನಡೆಯಿತು. ಒಟಿಟಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಲೈಂಗಿಕತೆಯನ್ನು ಪ್ರಚೋದಿಸುವ ಅಶ್ಲೀಲ ಕಂಟೆಂಟ್ ಗಳು ಹೆಚ್ಚಿವೆ. ಇದರ ಮೇಲೆ ನಿಷೇಧ ಹೇರಿ, ರಾಷ್ಟ್ರೀಯ ಕಂಟೆಂಟ್ ನಿಯಂತ್ರಣ ಪ್ರಾಧಿಕಾರವನ್ನು ಸ್ಥಾಪಿಸಬೇಕು. ಅದರ ಮೇಲೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಐದು ಅರ್ಜಿದಾರರು ಕೋರಿದ್ದಾರೆ.
ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ವಿಷಯದ ಮೇಲೆ ಈಗಾಗಲೇ ನಿಬಂಧನೆಗಳು ಜಾರಿಯಲ್ಲಿವೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಪೀಠಕ್ಕೆ ತಿಳಿಸಿದರು.
ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪೀಠವು ಮಹತ್ವದ ಹೇಳಿಕೆಗಳನ್ನು ನೀಡಿತು. ಲೈಂಗಿಕಪ್ರೇರಿತ ಕಂಟೆಂಟ್ ಗಳು ಮಕ್ಕಳು, ಯುವಕರು ಹಾಗೂ ವಯಸ್ಕರ ಮನಸ್ಸನ್ನು ಕಲುಷಿತಗೊಳಿಸುತ್ತದೆ. ಇದು ವಿಕೃತ ಮತ್ತು ಅಸ್ವಾಭಾವಿಕ ಲೈಂಗಿಕತೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿತು. ಇದರಿಂದ ದೇಶದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುವ ಅಪಾಯವಿದೆ ಎಂದು ಎಚ್ಚರಿಸಿತು.