ಬೆಂಗಳೂರು : ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನ್ಯಾಯಾಧೀಕರಣದ ತೀರ್ಪಿನ ಅನ್ವಯ ರಾಜ್ಯದ ಪಾಲಿನ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಇದೇ ತಿಂಗಳು 7ರಂದು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಸಭೆಯಲ್ಲಿ ಒತ್ತಡ ಹಾಕಲಾಗುವುದು. ಈ ಸಭೆಯ ನಂತರ ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.ಮಂಡ್ಯ ಜಿಲ್ಲೆ ಕೆಆರ್ಎಸ್ ಬೃಂದಾವನ ಉದ್ಯಾನವನದಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, 2010ರಲ್ಲಿ ಕೃಷ್ಣಾ ನದಿ ನ್ಯಾಯಾಧೀಕರಣ ತೀರ್ಪಿನ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸುವ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಒತ್ತಡ ಹಾಕಿದ್ದೇವೆ. ಹೀಗಾಗಿ ಕೇಂದ್ರ ಸಚಿವರು ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳ ಸಚಿವರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ರಾಜ್ಯದ ನಿಲುವನ್ನು ಮಂಡಿಸುವ ಮುನ್ನ ಇಂದು ಪೂರ್ವಭಾವಿ ಸಭೆ ನಡೆಸಿದ್ದೇವೆ ಎಂದರು.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ಕಾನೂನು ಸಚಿವರು, ಸಂಬಂಧ ಪಟ್ಟ ಎಲ್ಲಾ ಜಿಲ್ಲಾ ಸಚಿವರುಗಳಾದ ಆರ್. ಬಿ ತಿಮ್ಮಾಪುರ, ಎಂ. ಬಿ ಪಾಟೀಲ್, ಶಿವಾನಂದ ಪಾಟೀಲ್, ದರ್ಶನಾಪುರ ಅವರ ಜತೆ ಚರ್ಚೆ ಮಾಡಿದ್ದೇವೆ. ಸಚಿವರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಈ ಮಧ್ಯೆ ದೆಹಲಿ ವಕೀಲರ ತಂಡ ಕೂಡ ಸಭೆಯಲ್ಲಿ ಇದ್ದರು. ಮೇ 7ರ ಸಭೆಯಲ್ಲಿ ನಮ್ಮ ನಿಲುವು ಏನು, ನಮ್ಮ ತಂತ್ರಗಾರಿಕೆ ಏನು ಎಂದು ಚರ್ಚೆ ಮಾಡಲಾಗಿದೆ. ಕೇಂದ್ರದ ಸಭೆಯಲ್ಲಿ ಇಡೀ ತಂಡ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯದ ನಿಲುವು ಮಂಡಿಸುತ್ತೇವೆ ಎಂದು ತಿಳಿಸಿದರು.
ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಬೆಳಗಾವಿ ಅಧಿವೇಶನದಲ್ಲೇ ತೀರ್ಮಾನ ಮಾಡಿದ್ದೇವೆ. 2010ರಲ್ಲಿ ನ್ಯಾಯಾಧೀಕರಣದ ತೀರ್ಪು ಬಂದಿದ್ದು, ಈವರೆಗೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ. ಕಳೆದ 15 ವರ್ಷಗಳಲ್ಲಿ ನಮ್ಮ ರಾಜ್ಯಕ್ಕೆ ಭಾರಿ ನಷ್ಟವಾಗಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಪ್ರತಿ ವರ್ಷ ಯೋಜನಾ ವೆಚ್ಚದ ಪ್ರಮಾಣವೂ ಏರಿಕೆಯಾಗುತ್ತಿದೆ. ನೀರು ಅನಗತ್ಯವಾಗಿ ಪೋಲಾಗುತ್ತಿದ್ದು, ಇದನ್ನು ಬಳಸಿಕೊಳ್ಳಲು ಒತ್ತಡ ಹಾಕುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಪರಿಸ್ಥಿತಿ ಅರಿತಿದ್ದು, ಸಭೆ ಕರೆದಿರುವುದು ಸ್ವಾಗತಾರ್ಹ.
ಈ ವರ್ಷ ದಸರಾ ಹಬ್ಬದ ಜತೆಗೆ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ತಮಿಳುನಾಡಿಗೆ ಪ್ರತಿ ವರ್ಷ 177 ಟಿಎಂಸಿ ನೀರನ್ನು ಬಿಡಬೇಕಿದೆ. ಕಾವೇರಿ ಆರತಿ ಘೋಷಣೆ ಮಾಡಿದ ನಂತರ ತಮಿಳುನಾಡಿಗೆ 295 ಟಿಎಂಸಿ ನೀರು ಹರಿದಿದೆ. ಆ ಮೂಲಕ 118 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದಿದೆ. ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದೆ. ಈ ಭಾಗದ ರೈತರು ಭತ್ತ, ಕಬ್ಬು ಬೆಳೆಯುತ್ತಿದ್ದಾರೆ. ಕಾವೇರಿ ಆರತಿ ಕಾರ್ಯಕ್ರಮ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ. ಕೊಡಗಿನಿಂದ ಹಿಡಿದು ಇಡೀ ಕರ್ನಾಟಕದ ಸಂಸ್ಕೃತಿ, ತಮಿಳುನಾಡು ಹಾಗೂ ಕೇರಳ ಸಂಪ್ರದಾಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ನಡೆಸಲು ಚರ್ಚೆ ಮಾಡಲಾಗಿದೆ. ಈ ಕಾರ್ಯಕ್ರಮ ವಾರದಲ್ಲಿ ಎಷ್ಟು ದಿನ ಇರಬೇಕು, ಪೂಜಾ ಕಾರ್ಯಗಳು ಯಾವ ರೀತಿ ನೆರವೇರಬೇಕು ಎಂದು ಚರ್ಚೆ ಮಾಡಲಾಗಿದೆ. ಕಾವೇರಿ ನದಿಯಿಂದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುತ್ತಿದೆ. ನಮ್ಮ ಧಾರ್ಮಿಕ ಹಾಗೂ ಸಂಸ್ಕೃತಿ ಒಳಗೊಂಡಂತೆ ಈ ಕಾರ್ಯಕ್ರಮವನ್ನು ನೀರಾವರಿ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ನಡೆಸಲಾಗುವುದು ಎಂದು ಹೇಳಿದರು.